*ಮಸ್ಕಿ* : ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿದಾರರು ಕೇಳಿದ ಮಾಹಿತಿಯನ್ನು ನಿಗದಿತ ಅವಧಿಯಲ್ಲಿ ಒದಗಿಸದ ಹಿನ್ನೆಲೆಯಲ್ಲಿ ಮಸ್ಕಿ ತಾಲೂಕಿನ ತಲೇಖಾನ ಗ್ರಾಮ ಪಂಚಾಯಿತಿಯ ಸಾರ್ವಜನಿಕ ಮಾಹಿತಿ ಅಧಿಕಾರಿಗೆ ರಾಜ್ಯ ಮಾಹಿತಿ ಆಯೋಗ ₹10 ಸಾವಿರ ದಂಡ ವಿಧಿಸಿ ಆದೇಶಿಸಿದೆ.
15ನೇ ಹಣಕಾಸು ಯೋಜನೆಯ ಕ್ರಿಯಾ ಯೋಜನೆಗೆ ಸಂಬಂಧಿಸಿದಂತೆ ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕ ಘಟಕದ ಅಧ್ಯಕ್ಷ ದುರ್ಗಾರಾಜ್ ಅವರು ಗ್ರಾಮ ಪಂಚಾಯಿತಿಗೆ ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಿ ಮಾಹಿತಿ ಕೋರಿದ್ದರು.ಆದರೆ,ನಿಗದಿತ ಸಮಯದಲ್ಲಿ ಅರ್ಜಿದಾರರಿಗೆ ಮಾಹಿತಿ ನೀಡದ ಕಾರಣ ಅವರು ಮೇಲ್ಮನವಿ ಸಲ್ಲಿಸಿದ್ದರು.
ಈ ಕುರಿತು ವಿಚಾರಣೆ ನಡೆಸಿದ ರಾಜ್ಯ ಮಾಹಿತಿ ಆಯೋಗದ ಆಯುಕ್ತ ಬಿ.ವೆಂಕಟಸಿಂಗ್ ಅವರು,ಮಾಹಿತಿ ನೀಡುವಲ್ಲಿ ವಿಳಂಬ ಮಾಡಿದ ಸಾರ್ವಜನಿಕ ಮಾಹಿತಿ ಅಧಿಕಾರಿಗೆ ₹10 ಸಾವಿರ ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.
ಮಾಹಿತಿ ಹಕ್ಕು ಕಾಯ್ದೆಯಡಿ ಸಾರ್ವಜನಿಕರು ಕೇಳುವ ಮಾಹಿತಿಯನ್ನು ನಿಗದಿತ ಅವಧಿಯಲ್ಲಿ ಒದಗಿಸುವುದು ಅಧಿಕಾರಿಗಳ ಕರ್ತವ್ಯವಾಗಿದ್ದು,ಕರ್ತವ್ಯ ನಿರ್ಲಕ್ಷ್ಯ ಮಾಡಿದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂಬುದಕ್ಕೆ ಈ ಪ್ರಕರಣ ಉದಾಹರಣೆಯಾಗಿದೆ.
