ಸಿರವಾರ, ನ.14: ತಾಲೂಕಿನ ಹೀರಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹೋಬಳಿ ಮಟ್ಟದ ಪ್ರಜಾ ಸೇವೆ ಆಂದೋಲನ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಸಾರ್ವಜನಿಕರಿಗೆ ವಿವಿಧ ಸರ್ಕಾರಿ ಇಲಾಖೆಗಳ ಸೇವೆಗಳು, ಯೋಜನೆಗಳ ಮಾಹಿತಿ ಹಾಗೂ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಒದಗಿಸುವ ಉದ್ದೇಶದಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಸಿರವಾರ ತಹಶೀಲ್ದಾರ್ ಅಶೋಕ್ ಪವಾರ್ ಭಾಗವಹಿಸಿ, ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳುವಂತೆ ಕರೆ ನೀಡಿದರು. ತಹಶೀಲ್ದಾರ್ ಕಚೇರಿ, ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ಇಲಾಖೆಗಳ ಸೇವೆಗಳು, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಲಭ್ಯವಿರುವ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು.
ಆರೋಗ್ಯ ಇಲಾಖೆಯಿಂದ ಉಚಿತ ಆರೋಗ್ಯ ತಪಾಸಣೆ ನಡೆಸಿ ಸಾರ್ವಜನಿಕರಲ್ಲಿ ಆರೋಗ್ಯ ಜಾಗೃತಿ ಮೂಡಿಸಲಾಯಿತು. ವಿವಿಧ ಇಲಾಖೆಗಳ ಅಧಿಕಾರಿಗಳು ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ, ಸ್ಥಳದಲ್ಲೇ ಅಗತ್ಯ ಮಾರ್ಗದರ್ಶನ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಿರವಾರ ಪೊಲೀಸ್ ಠಾಣೆಯ ಪಿಎಸ್ಐ ಚಂದ್ರಶೇಖರ್ ಹಿರೇಮಠ, “ಯಾವುದೇ ಕಳ್ಳತನ, ಜಗಳ, ಮೋಸ ಅಥವಾ ಕಾನೂನುಬಾಹಿರ ಘಟನೆ ನಡೆದರೆ ತಕ್ಷಣ 112 ಸಹಾಯವಾಣಿಗೆ ಕರೆ ಮಾಡಿ. ದೂರು ದಾಖಲಿಸಲು ಹಿಂಜರಿಯಬೇಡಿ. ಸಾರ್ವಜನಿಕರ ರಕ್ಷಣೆಗಾಗಿ ಪೊಲೀಸ್ ಇಲಾಖೆ ಸದಾ ಸಿದ್ಧವಾಗಿದೆ” ಎಂದು ತಿಳಿಸಿದರು.
ವಿದ್ಯುತ್ ಇಲಾಖೆಯ ಎಇಇ ಮಮ್ಮದ್ ಸಫಿ ಅವರು ವಿದ್ಯುತ್ ಸುರಕ್ಷತೆ, ವಿದ್ಯುತ್ ಉಳಿತಾಯ ಹಾಗೂ ಇಲಾಖೆಯ ವಿವಿಧ ಸೇವೆಗಳ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಮತದಾರರ ನೋಂದಣಿ, ಪಿಂಚಣಿ ಸೇರಿದಂತೆ ವಿವಿಧ ಸರ್ಕಾರಿ ಸೇವೆಗಳ ಕುರಿತು ಮಾಹಿತಿ ನೀಡಲಾಯಿತು. ಆರೋಗ್ಯ ಇಲಾಖೆಯ ಅಧಿಕಾರಿ ಸುರೇಶ್, ಪರಿಮಳ, ಆರೋಗ್ಯ ಇಲಾಖೆ ಸಿಬ್ಬಂದಿ, ಅಂಗನವಾಡಿ ಶಿಕ್ಷಕರು ಮತ್ತು ಸಹಾಯಕರು, ಆಶಾ ಕಾರ್ಯಕರ್ತೆಯರು, ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗೂ ಹೀರಾ ಮತ್ತು ಸುತ್ತಮುತ್ತಲಿನ ಗ್ರಾಮಗಳ ಅನೇಕ ಗ್ರಾಮಸ್ಥರು ಭಾಗವಹಿಸಿ ಕಾರ್ಯಕ್ರಮದ ಪ್ರಯೋಜನ ಪಡೆದುಕೊಂಡರು.
