ಅರಕೇರಾ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಸಂಪನ್ಮೂಲ ಕೇಂದ್ರದ ವತಿಯಿಂದ ಜ್ಞಾನ ಲಹರಿ ಆಂಗ್ಲ ಮಾಧ್ಯಮ ಪಬ್ಲಿಕ್ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.
ಕಾರ್ಯಕ್ರಮವನ್ನು ಶ್ರೀ ಚನ್ನಬಸವೇಶ್ವರ ಆರೂಢ ಮಠದ ಅಯ್ಯಣ್ಣ ತಾತನವರು ಉದ್ಘಾಟಿಸಿದರು. ಶಿಕ್ಷಣ ಸಂಯೋಜಕರಾದ ರಾಜನಗೌಡ ಕೋಳೂರು ಅವರು ಮಾತನಾಡಿ ಈ ಪ್ರತಿಭಾ ಕಾರಂಜಿ ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆಯನ್ನು ಅನಾವರಣ ಮಾಡಲು ಸೂಕ್ತ ವೇದಿಕೆಯಾಗಿದೆ. ಕಳೆದ ವರ್ಷ ಪ್ರತಿಭಾ ಕಾರಂಜಿಯಲ್ಲಿ ಭಾಗವಹಿಸಿ ಗಲಗ ಗ್ರಾಮದ ವಿದ್ಯಾರ್ಥಿಗಳು ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ಪ್ರಶಸ್ತಿ ಪಡೆದಿದ್ದಾರೆ. ಅದೇ ರೀತಿ ಅವಕಾಶವನ್ನು ಬಳಸಿಕೊಂಡು ಕ್ರಿಯಾಶೀಲರಾಗಬೇಕೆಂದು ಸಲಹೆ ನೀಡಿದರು.
ಪ್ರತಿಭಾ ಕಾರಂಜಿಯಲ್ಲಿ ಭಾಷಣ, ಜಾನಪದ ಗೀತೆ, ನೃತ್ಯ, ಕಥೆ, ಚಿತ್ರ ಕಲೆ, ಧಾರ್ಮಿಕ ಪಠಾಣ್, ಆಶುಭಾಷಣ, ವೇಷಭೂಷಣ ಸೇರಿದಂತೆ ವಿವಿಧ ಸ್ಪರ್ಧೆಗಳು ನಡೆಯಿತು. ಸ್ಪರ್ಧೆಯಲ್ಲಿ ಎರಡು ಪ್ರೌಢ ಶಾಲೆಗಳು, 8 ಹಿರಿಯ ಪ್ರಾಥಮಿಕ ಶಾಲೆಗಳು, 12 ಕಿರಿಯ ಪ್ರಾಥಮಿಕ ಶಾಲೆಗಳು ಸೇರಿದಂತೆ ಒಟ್ಟು 20ಕ್ಕೂ ಹೆಚ್ಚು ಶಾಲೆಯ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.ಬಳಿಕ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪದಕ ಮತ್ತು ಪ್ರಶಸ್ತಿ ಪತ್ರ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ದುರ್ಗಪ್ಪ ಗೌಡ ಮತ್ತು ಗ್ರಾಮ ಪಂಚಾಯಿತಿ ಸದಸ್ಯರು, ತಾಲೂಕಿನ ಸಂಪನ್ಮೂಲ ವ್ಯಕ್ತಿಗಳಾದ ವೆಂಕಟೇಶ, ಮನೋಹರ್ ಶಾಸ್ತ್ರೀ, ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ನಿಂಗಪ್ಪ ಮಾಲೀ, ಶಾಲೆಯ ಆಡಳಿತ ಮಂಡಳಿ ಅಧಿಕಾರಿಗಳಾದ ವೀರಭದ್ರಪ್ಪ ಹೇರೂರು, ವಿವಿಧ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

