ರಾಯಚೂರು ಡಿಸೆಂಬರ್ 04 (ಕರ್ನಾಟಕ ವಾರ್ತೆ): ಕನ್ನಡ ಪುಸ್ತಕ ಪ್ರಾಧಿಕಾರದಿಂದ 2025-26 ನೇ ಸಾಲಿನ ಯುವ ಬರಹಗಾರರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಪ್ರೋತ್ಸಾಹಧನ ನೀಡುವ ಸಲುವಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಯ್ಕೆಯಾದ 50 ಯುವ ಬರಹಗಾರರ ಹಸ್ತ ಪ್ರತಿಗಳ ಪ್ರಕಟಣೆಗೆ ಮಾತ್ರ ರೂ.15,000 ಗಳ ಪ್ರೋತ್ಸಾಹಧನ ನೀಡಲಾಗುವುದು. ಅರ್ಜಿದಾರರು 18 ರಿಂದ 40 ವರ್ಷ ವಯೋಮಿತಿಯವರಾಗಿರಬೇಕು. ಸ್ವ-ವಿವರವುಳ್ಳ ಪ್ರಾಧಿಕಾರದ ಅರ್ಜಿ ನಮೂನೆಯೊಂದಿಗೆ ದೃಢೀಕೃತ ಎಸ್.ಎಸ್.ಎಲ್.ಸಿ. ಪ್ರಮಾಣ ಪತ್ರದ ಪ್ರತಿ ಅಥವಾ ಅಧಿಕೃತವಾದ, ದೃಢೀಕರಿಸಲ್ಪಟ್ಟ ಜನ್ಮ ದಾಖಲಾತಿ ಪ್ರಮಾಣ ಪತ್ರದ ಪ್ರತಿಯನ್ನು ಸಲ್ಲಿಸಬೇಕು. ಅಲ್ಲದೆ ಪ್ರಸ್ತುತ ಸಲ್ಲಿಸಲ್ಪಡುತ್ತಿರುವ ಕೃತಿಯು ತಮ್ಮ ಚೊಚ್ಚಲ ಕೃತಿಯಾಗಿದ್ದು, ಎಲ್ಲಿಯೂ ಪ್ರಕಟವಾಗಿಲ್ಲವೆಂದು ಸ್ವಯಂ ದೃಢೀಕರಣ ನೀಡಬೇಕು.
ಆಯ್ಕೆಗಾಗಿ ಸಲ್ಲಿಸುವ ಹಸ್ತ ಪ್ರತಿಯು ಡಿ.ಟಿ.ಪಿ. ಮಾಡಿಸಿದಾಗ 1/8 ಡೆಮ್ಮಿ ಅಳತೆಯಲ್ಲಿ ಕನಿಷ್ಟ 60 ಪುಟಗಳಿರಬೇಕು. ಅನುವಾದ, ಪಠ್ಯಪುಸ್ತಕ ಹಾಗೂ ಬೇರಾವುದೇ ಪದವಿ, ಸ್ನಾತಕೋತ್ತರ ಪದವಿ (ಪಿಎಚ್‌ಡಿ) ಗೆ ಸಿದ್ಧಪಡಿಸಿದ ಸಂಶೋಧನಾ ಪ್ರಬಂಧಗಳನ್ನು ಹೊರತುಪಡಿಸಿ, ಕಥೆ, ಕಾದಂಬರಿ, ಕವನ, ನಾಟಕ, ವಿಮರ್ಶಾ ಲೇಖನ, ಪ್ರಬಂಧ ಮುಂತಾದ ಕನ್ನಡ ಸಾಹಿತ್ಯ ಪ್ರಕಾರಗಳಿಗೆ ಸಂಬಂಧಿಸಿದಂತೆ ಹಸ್ತ ಪ್ರತಿ ಇರಬೇಕು. ಕೃತಿಯ ಪಠ್ಯದಲ್ಲಿ ಯಾವುದೇ ಧರ್ಮ, ದೇವರು, ಜಾತಿ, ಕೋಮು, ವೃತ್ತಿ, ಸಮುದಾಯ, ಭಾಷೆ, ಆಚರಣೆ, ಪದ್ಧತಿ, ಇತ್ಯಾದಿ ಸಂಗತಿಗಳಿಗೆ ಸಂಬಂಧಿಸಿದಂತೆ ಹಾಗೂ ರಾಷ್ಟ್ರೀಯ ನಾಯಕರುಗಳ ಕುರಿತಂತೆ ನೇರವಾಗಿಯೇ ಆಗಲಿ ಅಥವಾ ಪರೋಕ್ಷವಾಗಿಯೇ ಆಗಲಿ ಮನನೋಯಿಸುವಂತಹ ವಿಷಯವಾಗಲಿ ಇರಬಾರದು. ಅಲ್ಲದೆ ರಾಷ್ಟ್ರೀಯ ಭಾವೈಕ್ಯತೆಗೆ ಧಕ್ಕೆ ತರುವಂತಹ ವಿಷಯ, ಸಂಗತಿಗಳು ಪ್ರಸ್ತಾಪವಾಗಿರಬಾರದು. ಪ್ರಾಧಿಕಾರಕ್ಕೆ ಸಲ್ಲಿಸಲ್ಪಡುವ ಅರ್ಜಿಗಳೊಂದಿಗಿನ ಹಸ್ತ ಪ್ರತಿಗಳನ್ನು ಹಿಂದಿರುಗಿಸಲಾಗುವುದಿಲ್ಲ. ಆದ್ದರಿಂದ ತಮ್ಮ ಮೂಲ ಹಸ್ತ ಪ್ರತಿಯ ಒಂದು ಪ್ರತಿಯನ್ನು ತಮ್ಮ ಬಳಿಯೇ ಇಟ್ಟು ಕೊಳ್ಳುವುದು.
ಅರ್ಜಿಗಳೊಂದಿಗೆ ಡಿ.ಟಿ.ಪಿ. ಮಾಡಿದ ಹಸ್ತ ಪ್ರತಿಯನ್ನು ಹಸ್ತ ಪ್ರತಿಯನ್ನು ಡಿಸೆಂಬರ್ 24ರ ಸಂಜೆ 5.30 ಗಂಟೆಯೊಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡಭವನ, ಜೆ.ಸಿ.ರಸ್ತೆ, ಬೆಂಗಳೂರು-560002 ಅವರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಕನ್ನಡ ಪುಸ್ತಕ ಪ್ರಾಧಿಕಾರದ ವೆಬ್‌ಸೈಟ್ ವಿಳಾಸ: www.kannadapustakapradhikara.comಅಥವಾ ದೂರವಾಣಿ ಸಂಖ್ಯೆ: 080-22484516, 22107704ಗೆ ಸಂಪರ್ಕಿಸಬಹುದು ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
