ಮಸ್ಕಿ: ಕ್ಷೇತ್ರದ ಸಮಗ್ರ ಹಾಗೂ ಸಮತೋಲನದ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದ್ದು, ಗ್ರಾಮೀಣ ಭಾಗಗಳಿಗೂ ಸಮಾನವಾಗಿ ಮೂಲಸೌಕರ್ಯ ಒದಗಿಸಲಾಗುತ್ತಿದೆ ಎಂದು ಶಾಸಕ ಹಾಗೂ ಖಾದಿ ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಆರ್. ಬಸನಗೌಡ ತುರ್ವಿಹಾಳ ಶನಿವಾರ ಹೇಳಿದರು.
ತಾಲ್ಲೂಕಿನ ಮೆರನಾಳ, ಗೋನಾಳ, ಹರ್ವಾಪೂರ, ಮುದಬಾಳ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಹಮ್ಮಿಕೊಂಡಿದ್ದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ರಸ್ತೆ, ಕುಡಿಯುವ ನೀರು, ವಿದ್ಯುತ್, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ ಶಾಶ್ವತ ಪರಿಹಾರ ಒದಗಿಸುವ ಗುರಿಯೊಂದಿಗೆ ಕಾರ್ಯನಿರ್ವಹಿಸಲಾಗುತ್ತಿದೆ ಎಂದರು. ಗ್ಯಾರಂಟಿ ಯೋಜನೆಗಳ ಮೂಲಕ ಬಡವರು, ರೈತರು ಹಾಗೂ ಕಾರ್ಮಿಕ ವರ್ಗದ ಬದುಕು ಸುಧಾರಣೆಯಾಗುತ್ತಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಮೈಬುಸಾಬ ಮುದ್ದಾಪುರ, ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ಹನುಮಂತಪ್ಪ ಮುದ್ದಾಪೂರ, ಪಂಪನಗೌಡ ಪಾಟೀಲ ಗುಡದೂರು, ಕ್ಯಾಷುಟೆಕ್ ಎಂಜಿನಿಯರ್ ತಿಮ್ಮಣ್ಣ ಉಪ್ಪಾರ ಸೇರಿದಂತೆ ಅನೇಕ ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

