ರಾಯಚೂರು ಡಿಸೆಂಬರ್ 20 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ ಮತ್ತು ಜಿಲ್ಲಾ ಮಹಿಳಾ ಸಬಲೀಕರಣ ಘಟಕ ರಾಯಚೂರು ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲೆಯ ದೇವದುರ್ಗ ತಾಲೂಕಿನ ಆಲ್ಕೋಡ್ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕೇಂದ್ರ ಸರ್ಕಾರದ ಬೇಟಿ ಬಚಾವೊ, ಬೇಟಿ ಪಡಾವೊ ಯೋಜನೆಯ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮವು ಇತ್ತೀಚಿಗೆ ನಡೆಯಿತು.
ಈ ವೇಳೆ ಮಿಷನ್ ಶಕ್ತಿ ಯೋಜನೆಯ ಜಿಲ್ಲಾ ಸಂಯೋಜಕರಾದ ಬಾವಸಲಿ ಅವರು ಮಾತನಾಡಿ, ಬೇಟಿ ಬಚಾವೊ, ಬೇಟಿ ಪಡಾವೊ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿದೆ. ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಉತ್ತೇಜಿಸುವುದು, ಹೆಣ್ಣು ಭ್ರೂಣ ಹತ್ಯೆ ತಡೆಗಟ್ಟುವುದು, ಲಿಂಗ ತಾರತಮ್ಯ ಹೋಗಲಾಡಿಸುವುದು, ಹೆಣ್ಣು ಮಗುವಿಗೆ ಉಳಿವು ಮತ್ತು ಅವರ ರಕ್ಷಣೆಯನ್ನು ಖಾತ್ರಿಗೊಳಿಸುವುದು, ಹೆಣ್ಣು ಮಗುವಿಗೆ ಪ್ರಾಮುಖ್ಯತೆ ಮತ್ತು ಅವರ ಹಕ್ಕುಗಳ ಧನಾತ್ಮಕ ಸಂದೇಶವನ್ನು ನೀಡುವ ನಿಟ್ಟಿನಲ್ಲಿ ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಪ್ರಮುಖವಾಗಿ ಹೆಣ್ಣು ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು. ಹೆಣ್ಣು ಮಕ್ಕಳು ಶಿಕ್ಷಣದಿಂದ ವಂಚಿತರಾದರೆ ಸಾಮಾಜಿಕ ಪಿಡುಗುಗಳಾದ ಬಾಲ್ಯ ವಿವಾಹ, ಬಾಲ ಕಾರ್ಮಿಕತೆ ಎಂಬ ಅನಿಷ್ಟ ಪದ್ಧತಿಯಲ್ಲಿ ತೊಡಗಿಕೊಳ್ಳುತ್ತಾರೆ. ಬಾಲ್ಯ ವಿವಾಹ ಮತ್ತು ಬಾಲ ಕಾರ್ಮಿಕ ಪದ್ದತಿ ಶಿಕ್ಷಾರ್ಹ ಅಪರಾಧವಾಗಿದ್ದು ಇದನ್ನು ಪ್ರೋತ್ಸಾಹಿಸುವವರಿಗೆ ಕಠಿಣ ಶಿಕ್ಷೆ ಇದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರಾದ ಭೀಮರಾಯ ಸೇರಿದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಸತಿ ಶಾಲೆಯ ನಿಲಯ ಪಾಲಕರು, ಸಹ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಇದ್ದರು.

Leave a Reply

Your email address will not be published. Required fields are marked *