ರಾಯಚೂರು ಡಿಸೆಂಬರ್ 22 (ಕರ್ನಾಟಕ ವಾರ್ತೆ): ಇಲ್ಲಿನ ಕೃಷಿ ಇಲಾಖೆಯಿಂದ ಸಿರಿಧಾನ್ಯ, ಸಾವಯವ ಉತ್ಪನ್ನಗಳ ಕುರಿತು ಗ್ರಾಹಕರಿಗೆ ಜಾಗೃತಿ ಮೂಡಿಸಲು ಸಿರಿಧಾನ್ಯಗಳ ನಡಿಗೆ ರೋಡ್ ಶೋ ಕಾರ್ಯಕ್ರಮಕ್ಕೆ ಡಿಸೆಂಬರ್ 22ರಂದು ನಗರದ ಜಿಲ್ಲಾ ಪಂಚಾಯತ್ ಆವರಣದಲ್ಲಿ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು ಹಾಗೂ ಕರ್ನಾಟಕ ವಿಧಾನ ಪರಿಷತ್ತು ಸಭಾ ನಾಯಕರಾದ ಎನ್.ಎಸ್.ಬೋಸರಾಜು ಅವರು ಬಣ್ಣಬಣ್ಣದ ಬಲೂನ್ ಹಾರಿಬಿಡುವ ಮೂಲಕ ಚಾಲನೆ ನೀಡಿದರು.
ಜಾಗೃತಿ ನಡಿಗೆಯು ಜಿಲ್ಲಾ ಪಂಚಾಯತ್ ಕಚೇರಿ ಆವರಣದಿಂದ ಆರಂಭವಾಗಿ, ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣ, ಜಂಟಿ ಕೃಷಿ ನಿರ್ದೇಶಕರ ಕಚೇರಿ, ಬಸವೇಶ್ವರ ವೃತ್ತ ಮಾರ್ಗವಾಗಿ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ರಾಯಚೂರು ಆವರಣದವರೆಗೆ ಸಾಗಿತು.
ಮೆರವಣಿಗೆಯುದ್ದಕ್ಕೂ ಸಿರಿಧಾನ್ಯಗಳ ಮಹತ್ವದ ಕುರಿತು ಘೋಷ ವಾಕ್ಯಗಳನ್ನು ಕೂಗಿ ಜಾಗೃತಿ ಮೂಡಿಸಲಾಯಿತು. ಕಾರ್ಯಕ್ರಮದಲ್ಲಿ ಡೊಳ್ಳು ಕುಣಿತ, ಸಿರಿಧಾನ್ಯ ಪ್ರದರ್ಶನ ಗಮನ ಸೆಳೆದವು. ರೈತರಿಗೆ ಸಂಬಂಧಿಸಿದ ನೃತ್ಯ ಪ್ರದರ್ಶನ ವಿಶೇಷವಾಗಿತ್ತು.
ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಈಶ್ವರ ಕುಮಾರ್ ಕಾಂದೂ, ಕೃಷಿ ವಿಜ್ಞಾನಗಳ ವಿಶ್ವ ವಿದ್ಯಾಲಯದ ಕುಲಪತಿ ಡಾ.ಎಂ.ಹನುಮಂತಪ್ಪ, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಪ್ರಕಾಶ ಚೌಹಾಣ್, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಕೃಷ್ಣ ಶಾವಂತೇಗೇರಾ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಕೃಷಿ ಅಧಿಕಾರಿಗಳು, ಕೃಷಿ ಪರಿಕರ ಮಾರಾಟಗಾರರು, ಕೃಷಿ ಪದವೀಧರ ವಿಧ್ಯಾರ್ಥಿಗಳು ಇದ್ದರು.

Leave a Reply

Your email address will not be published. Required fields are marked *