ರಾಯಚೂರು ಡಿಸೆಂಬರ್ 22 (ಕರ್ನಾಟಕ ವಾರ್ತೆ): ರಾಜ್ಯ ಸರ್ಕಾರದ ಗೃಹ ಲಕ್ಷ್ಮಿ, ಯುವನಿಧಿ, ಅನ್ನಭಾಗ್ಯ, ಗೃಹ ಜ್ಯೋತಿ ಹಾಗೂ ಶಕ್ತಿ ಯೋಜನೆಗಳು ಸಮಾಜದಲ್ಲಿನ ಎಲ್ಲ ವರ್ಗದ ಜನರ ಆರ್ಥಿಕ ಸಬಲತೆಗೆ ಕಾರಣವಾಗಿವೆ ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಎಸ್.ಆರ್.ಮೆಹರೋಜ್ ಖಾನ್ ಅವರು ಹೇಳಿದರು.
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಜಿಲ್ಲಾ ಕೌಶಲ್ಯ ಮಿಷನ್ ಹಾಗೂ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಕಲಬುರಗಿ ವಿಭಾಗದ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ, ರಾಯಚೂರಿನ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಇವರ ಸಂಯುಕ್ತಾಶ್ರದಲ್ಲಿ ಯುನನಿಧಿ ಯೋಜನೆ ಸೇರಿದಂತೆ ಐದು ಗ್ಯಾರಂಟಿ ಯೋಜನೆಗಳು ಸಮಾಜದಲ್ಲಿ ಉಂಟು ಮಾಡಿರುವ ಧನಾತ್ಮಕ ಪರಿಣಾಮಗಳ ಕುರಿತು ಡಿಸೆಂಬರ್ 22ರ ಸೋಮವಾರ ನಗರದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ ಭವನದಲ್ಲಿ ನಡೆದ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗಿಯಾಗಿ ಅವರು ಮಾತನಾಡಿದರು. ರಾಜ್ಯ ಸರ್ಕಾರವು ಬಡಜನರ ಕಲ್ಯಾಣಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ ಗಾಂಧೀಜಿ, ಡಾ.ಬಿ.ಆರ್.ಅಂಬೇಡ್ಕರ್ ಅವರ ಕನಸುಗಳನ್ನು ಸಾಕಾರಗೊಳಿಸುವಲ್ಲಿ ಯಶಸ್ವಿಯಾಗಿದೆ. ಸಮಾಜದಲ್ಲಿನ ಯುವ ಸಮೂಹ ಸೇರಿದಂತೆ ಎಲ್ಲರಿಗೂ ಗ್ಯಾರಂಟಿ ಯೋಜನೆಗಳು ಬಹಳ ಅನುಕೂಲವಾಗಿವೆ. ಈ ಯೋಜನೆಗಳಿಂದ ರಾಜ್ಯದ ಜನರ ಜೀವನಮಟ್ಟ ಸುಧಾರಣೆಯಾಗಿದೆ. ಮುಖ್ಯವಾಗಿ ಮಹಿಳೆಯರು ಆರ್ಥಿಕವಾಗಿ ಸಬಲರಾಗಿದ್ದಾರೆ. ಬಡಜನತೆಗೆ ಈ ಯೋಜನೆಗಳು ಬಹಳ ಸಹಕಾರಿಯಾಗಿವೆ ಎಂದರು.
ವಿದ್ಯಾರ್ಥಿಗಳೊಂದಿಗೆ ಸಂವಾದ: ಎಸ್.ಆರ್.ಮೆಹರೋಜ್ ಖಾನ್ ಅವರು ಇದೆ ವೇಳೆ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಯುವನಿಧಿ ಯೋಜನೆಯ ಸಹಾಯಧನದಿಂದ ಕಾನೂನು ಪದವಿ ಓದುತ್ತಿದ್ದು, ಇದೆ ರೀತಿ ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಹೆಚ್ಚಿನ ಮಟ್ಟದಲ್ಲಿ ಸೌಲಭ್ಯ ಒದಗಿಸಬೇಕೆಂದು ಕಾನೂನು ಪದವಿ ವಿದ್ಯಾರ್ಥಿ ಶಿವಪ್ಪ ಸಲಹೆ ಮಾಡಿದರು. ಗೃಹಲಕ್ಷಿ ಯೋಜನೆಯ ಸಹಾಯಧನವು ಸಕಾಲಕ್ಕೆ ಸಿಗುವ ಹಾಗೆ ನೋಡಿಕೊಳ್ಳಬೇಕು ಎಂದು ಕೃಷಿ ವಿವಿಯ ವಿದ್ಯಾರ್ಥಿನಿ ಪಾವನಿ ಜೀವಿ ತಿಳಿಸಿದರು. ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರು ಸ್ವಾವಲಂಬನೆ ಜೀವನ ನಡೆಸುತ್ತಿದ್ದಾರೆ. ಅನೇಕ ಮಹಿಳೆಯರು ಆರ್ಥಿಕವಾಗಿ ಸಬಲರಾಗಿದ್ದಾರೆ ಎಂದು ರಾಯಚೂರಿನ ವಡ್ಲೂರಿನ ಮಹೇಶ್ವರಿ ಅವರು ತಿಳಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಪಾಮಯ್ಯ ಮುರಾರಿ, ರಾಯಚೂರು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಪವನ್ ಕಿಶೋರ್ ಪಾಟೀಲ್, ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಸದಸ್ಯರು ಹಾಗೂ ಪ್ರಾದೇಶಿಕ ಅಸಮತೋಲನ ತಜ್ಞರಾದ ಡಾ.ರಝಾಕ್ ಉಸ್ತಾದ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕುಮಾರ್ ಕಾಂದೂ, ಕೃಷಿ ವಿವಿಯ ಕುಲಪತಿಗಳಾದ ಡಾ.ಎಂ.ಹನುಮಂತಪ್ಪ, ಆಡಳಿತ ಅಧಿಕಾರಿ ಜಾಗೃತಿ ದೇಶಪಾಂಡೆ, ಜಿಲ್ಲಾ ಪಂಚಾಯತ ಮುಖ್ಯ ಯೋಜನಾ ನಿರ್ದೇಶಕರಾದ ಡಾ.ಟಿ.ರೋಣಿ, ಸಿಡಾಕ್ ಜಂಟಿ ನಿರ್ದೇಶಕರಾದ ಜಿ.ಯು.ಹುಡೇದ್ ಸೇರಿದಂತೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರು, ಸದಸ್ಯರು ಹಾಗೂ ವಿದ್ಯಾರ್ಥಿಗಳು ಸಭೆಯಲ್ಲಿದ್ದರು.

 

Leave a Reply

Your email address will not be published. Required fields are marked *