ಕುಡಿಯುವ ನೀರು, ಬೀದಿ ದೀಪಗಳ ಅಳವಡಿಕೆ, ಚರಂಡಿ ಸ್ವಚ್ಚತೆಗೆ ಆದ್ಯತೆ ನೀಡಿ- ಮಲ್ಲಯ್ಯ ಅಂಬಾಡಿ
ಮಸ್ಕಿ: ಪುರಸಭೆ ವ್ಯಾಪ್ತಿಯ 23 ವಾರ್ಡುಗಳಿಗೆ ಬೇಸಿಗೆಯಲ್ಲಿ ಕುಡಿಯುವ ನೀರಿನ ತೊಂದರೆ ತಪ್ಪಿಸಲು ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ನೀರು ಪೂರೈಕೆ ಸ್ಥಗಿತಗೊಂಡ ನಂತರ ಐದು ದಿನಕ್ಕೊಮ್ಮೆ ಸಾರ್ವಜನಿಕರಿಗೆ ಕುಡಿಯುವ ನೀರು ಸರಬರಾಜು ಮಾಡಲು ಬುಧವಾರ ನಡೆದ ಪುರಸಭೆ ಸಾಮಾನ್ಯ ಸಭೆಯಲ್ಲಿ ನಿರ್ಣಯಿಸಲಾಯಿತು.
ಮಸ್ಕಿ ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಪುರಸಭೆ ಅಧ್ಯಕ್ಷ ಮಲ್ಲಯ್ಯ ಅಂಬಾಡಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಸದಸ್ಯರು ಜನವರಿ 10 ರಿಂದ ಕಾಲುವೆಗೆ ನೀರು ಬಂದ್ ಆಗುತ್ತದೆ. ಬೇಸಿಗೆ ದಿನಗಳಲ್ಲಿ ಕುಡಿಯುವ ನೀರಿನ ತೊಂದರೆ ಉಂಟಾಗುವ ಸಾಧ್ಯತೆ ಇದೆ. ಕೆರೆಗಳನ್ನು ಭರ್ತಿ ಮಾಡಿಕೊಳ್ಳುವ ಜೊತೆಗೆ ಪಟ್ಟಣದಲ್ಲಿನ 80 ಕ್ಕೂ ಹೆಚ್ಚು ಕೊಳವೆಭಾವಿಗಳ ಸ್ಥಿತಿಗತಿ ಪರಿಶೀಲಿಸಬೇಕು, ದುರಸ್ತಿಗೆ ಬಂದರೆ ಕೂಡಲೇ ಅವುಗಳನ್ನು ದುರಸ್ತಿಗೊಳಿಸಿ ಸನ್ನದ್ದ ಸ್ಥಿತಿಯಲ್ಲಿಟ್ಟುಕೊಳ್ಳಬೇಕು ಎಂದು ಸದಸ್ಯರು ಮುಖ್ಯಾಧಿಕಾರಿ ನರಸರೆಡ್ಡಿ ಅವರಿಗೆ ಸೂಚಿಸಿದರು.
ಪಟ್ಟಣದ ರಸ್ತೆ ಪಕ್ಕ ಹಾಗೂ ವೃತ್ತಗಳಲ್ಲಿ ಅಳವಡಿಸುವ ಜಾಹಿರಾತು ಬ್ಯಾನರ್ ಗಳನ್ನು ಭಹಿರಂಗ ಹರಾಜು ಮೂಲಕ ಖಾಸಗಿ ಗುತ್ತಿಗೆದಾರರಿಗೆ ನೀಡಲು ಸಭೆಯಲ್ಲಿ ತಿರ್ಮಾನಿಸಲಾಯಿತು.
ವಾರ್ಡ್ ಗಳಲ್ಲಿ ಕುಡಿಯುವ ನೀರು, ಬೀದಿ ದೀಪಗಳ ಅಳವಡಿಕೆ, ಚರಂಡಿ ಸ್ವಚ್ಚತೆ ಬಗ್ಗೆ ಪುರಸಭೆ ಅಧಿಕಾರಿಗಳು ಹೆಚ್ಚು ಗಮನ ಕೊಡಬೇಕು ಎಂದು ಕೆಲವು ಸದಸ್ಯರು ಆಗ್ರಹಿಸಿದರು. ಪಟ್ಟಣದ ಹೆದ್ದಾರಿಯಲ್ಲಿ ಬಿಡಾಡಿ ದನಗಳ ಹಾಗೂ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು ಅವುಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಮತ್ತೆ ಕೆಲವು ಸದಸ್ಯರು ಸಭೆಯಲ್ಲಿ ಒತ್ತಾಯಿಸಿದ ಘಟನೆ ನಡೆಯಿತು.
ಪುರಸಭೆ ವ್ಯಾಪ್ತಿಯಲ್ಲಿ ಬರುವ ಜಮೀನು ಸರ್ವೆ ನಂ 238/8, 402/1. 402/2, 402/3, 402/4, 402/5, 251/1, 92/1,103/4, 13/2 ರಲ್ಲಿ ಬಿನ್‌ಶೇತ್ಕಿ ಹೊಂದಿ, ನಗರ ಮತ್ತು ಗ್ರಾಮಾಂತರ ಯೋಜನಾ ಪ್ರಾಧಿಕಾರದಿಂದ ತಾಂತ್ರಿಕ ಅನುಮೋದನೆಗೊಂಡ ವಿನ್ಯಾಸಗಳಿಗೆ ಸಭೆಯಲ್ಲಿ ಆಡಳಿತಾತ್ಮಕ ಒಪ್ಪಿಗೆ ನೀಡಲಾಯಿತು. ಈ ಸಂದರ್ಭದಲ್ಲಿ
ಉಪಾಧ್ಯಕ್ಷೆ ಗೀತಾ ಶಿವರಾಜ, ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಚೇತನ ಪಾಟೀಲ, ಮುಖ್ಯಾಧಿಕಾರಿ ನರಸರೆಡ್ಡಿ ಸೇರಿದಂತೆ ಅನೇಕ ಸದಸ್ಯರು, ಪುರಸಭೆಯ ವಿವಿಧ ವಿಭಾಗದ ಅಧಿಕಾರಿಗಳು ಇದ್ದರು.

