ದೇವದುರ್ಗ: ತಾಲೂಕಿನ ಗ್ರಾಮೀಣ ಭಾಗದ ಜನರಿಗೆ ಉತ್ತಮ ಆರೋಗ್ಯ ಸೇವೆ ಒಗಿಸುವ ಗುರಿ ಹೊಂದಲಾಗಿದೆ. ಈ ನಿಟ್ಟಿನಲ್ಲಿ ಎರಡು ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಿದ್ದು, ಸಾರ್ವಜನಿಕರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಶಾಸಕಿ ಕರೆಮ್ಮ ಜಿ.ನಾಯಕ ಹೇಳಿದರು.
ತಾಲೂಕಿನ ಗಬ್ಬೂರಿನಲ್ಲಿ ಕೆಕೆಆರ್‌ಡಿಬಿಯಡಿ 10 ಕೋಟಿ ರೂ.ವೆಚ್ಚದ 30 ಹಾಸಿಗೆವುಳ್ಳ ಸಮುದಾಯ ಆರೋಗ್ಯ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಶುಕ್ರವಾರ ಮಾತನಾಡಿದರು.
ಈ ಹಿಂದೆ ಗಬ್ಬೂರಿನಲ್ಲಿ ಆರು ಹಾಸಿಗೆಯ ಪ್ರಾಥಮಿಕ ಆರೋಗ್ಯ ಕೇಂದ್ರವಿತ್ತು. ಅದನ್ನು 30 ಹಾಸಿಗೆ ಹೆಚ್ಚಿಸಿ ಸಮುದಾಯ ಆರೋಗ್ಯ ಕೇಂದ್ರವಾಗಿ ಮೇಲ್ದರ್ಜೆಗೇರಿಸಲಾಗಿದೆ. ಹಳ್ಳಿ ಜನರಿಗೆ ಇನ್ನು ಹೆಚ್ಚಿನ ಆರೋಗ್ಯ ಸೇವೆ ಒದಗಿಸಲು ಆಲ್ಕೋಡ್, ಮುಷ್ಟೂರು ಸೇರಿ ವಿವಿಧೆಡೆ ನೂತನ ಪ್ರಾಥಮಿಕ ಆರೋಗ್ಯ ಕೇಂದ್ರ ತರಲಾಗಿದೆ.
ಮುಷ್ಟೂರಿನಲ್ಲಿ ಆಸ್ಪತ್ರೆ ನಿರ್ಮಾಣಕ್ಕೆ 2.80 ಕೋಟಿ ರೂ. ಮಂಜೂರು ಮಾಡಿದ್ದು, ಶೀಘ್ರವೇ ಆಸ್ಪತ್ರೆ ಉದ್ಘಾಟನೆಯಾಗಲಿದೆ. ಅಲ್ಲದೆ ಜಾಲಹಳ್ಳಿ ಸಮುದಾಯ ಆರೋಗ್ಯ ಕೇಂದ್ರವನ್ನು 30 ಹಾಸಿಗೆಯಿಂದ 50ಹಾಸಿಗೆಗೆ ಹೆಚ್ಚಿಸಲು 5.34 ಕೋಟಿ ರೂ. ಅನುದಾನ ನೀಡಲಾಗಿದೆ. ಸಾರ್ವಜನಿಕರು ಆರೋಗ್ಯ ಸೇವೆ ಸೌಲಭ್ಯ ಸದ್ಬಳಕೆ ಮಾಡಿಕೊಳ್ಳಬೇಕು. ಅಭಿವೃದ್ಧಿ ಕಾಮಗಾರಿಗೆ ಸಹಕಾರ ನೀಡಬೇಕು ಎಂದರು.

