ಲಿಂಗಸಗೂರು : ಜ 10 ತಾಲೂಕಿನಲ್ಲಿ ಅಕ್ರಮ ಮದ್ಯ ಮಾರಾಟ ನಿಯಂತ್ರಿಸುವಲ್ಲಿ ಅಬಕಾರಿ ಇಲಾಖೆ ವಿಫಲವಾಗಿದೆ ಎಂದು ಆರೋಪಿಸಿ, ಲಿಂಗಸಗೂರು ಅಬಕಾರಿ ವಲಯದ ಸರ್ಕಲ್ ಇನ್ಸ್ಪೆಕ್ಟರ್ ಲಕ್ಷ್ಮೀದೇವಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ವಿವಿಧ ಸಂಘಟನೆಗಳ ಮುಖಂಡರು ಸಹಾಯಕ ಆಯುಕ್ತರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮ ಮದ್ಯ ಮಾರಾಟ ಹೆಚ್ಚಾಗಿದ್ದು, ಇದರಿಂದ ಸಾರ್ವಜನಿಕ ಶಾಂತಿ ಕದಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ದೂರು ನೀಡಿದವರ ಮಾಹಿತಿಯನ್ನು ಬಹಿರಂಗಪಡಿಸಿ ಬೆದರಿಕೆ ಹಾಕಲಾಗುತ್ತಿದೆ ಎಂಬ ಆರೋಪವೂ ಕೇಳಿಬಂದಿದೆ.
ಈ ಹಿನ್ನೆಲೆಯಲ್ಲಿ ಸಂಬಂಧಿಸಿದ ಅಧಿಕಾರಿಯನ್ನು ಅಮಾನತು ಮಾಡಿ ತನಿಖೆ ನಡೆಸಬೇಕು ಹಾಗೂ ದೂರುದಾರರಿಗೆ ರಕ್ಷಣೆ ಒದಗಿಸಬೇಕು ಎಂದು ಸಂಘಟನೆಗಳು ಆಗ್ರಹಿಸಿವೆ. ಮನವಿಗೆ ಸ್ಪಂದಿಸದಿದ್ದರೆ ಅಬಕಾರಿ ಇಲಾಖೆಯ ವಿರುದ್ಧ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

