ರಾಯಚೂರು ಜನವರಿ 13 (ಕರ್ನಾಟಕ ವಾರ್ತೆ): ವಿವಿಧ ಕಾರ್ಮಿಕ ಕಾಯ್ದೆಗಳಡಿ ನೋಂದಣಿಯಾಗಿರುವ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯವನ್ನು ಉದ್ಯೋಗದಾತರು ಪಡೆಯಬೇಕು ಎಂದು ಕಲಬುರಗಿ ಪ್ರಾದೇಶಿಕ ಉಪ ಕಾರ್ಮಿಕ ಆಯುಕ್ತರು ಡಾ.ವೆಂಕಟೇಶ ಅ.ಶಿಂದಿಹಟ್ಟಿ ಅವರು ತಿಳಿಸಿದ್ದಾರೆ.
ಕಾರ್ಖಾನೆಗಳ ಕಾಯ್ದೆ 1948, ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ 1961, ತೋಟ ಕಾರ್ಮಿಕರ ಕಾಯ್ದೆ 1951, ಬೀಡಿ ಮತ್ತು ಸಿಗಾ ರ್ಕಾರ್ಮಿಕರ ಕಾಯ್ದೆ 1966, ಮತ್ತು ಮೋಟಾರು ಸಾರಿಗೆ ಕಾರ್ಮಿಕರ ಕಾಯ್ದೆ 1961ರಡಿ ನೋಂದಣಿಯಾಗಿರುವ ಎಲ್ಲಾ ಕೈಗಾರಿಕೆಗಳು ಹಾಗೂ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 18 ರಿಂದ 52 ವರ್ಷದ ವಯೋಮಿತಿಯ ಎಲ್ಲಾ ಖಾಯಂ, ಗುತ್ತಿಗೆ, ಹೊರಗುತ್ತಿಗೆ ಮಹಿಳಾ ಕಾರ್ಮಿಕರುಗಳಿಗೆ ಅವರ ಋತುಚಕ್ರದ ಸಮಯದಲ್ಲಿ ಪ್ರತಿ ಮಾಸಿಕ ಒಂದು ದಿನದ ರಜೆಯಂತೆ ವಾರ್ಷಿಕ 12 ದಿನಗಳ ವೇತನ ಸಹಿತ ರಜೆಯ ಸೌಲಭ್ಯವನ್ನು ಉದ್ಯೋಗದಾತರು ಒದಗಿಸುವಂತೆ ಸರ್ಕಾರವು ಆದೇಶಿಸಿದ್ದು, ಮಹಿಳಾ ನೌಕರರು ಆಯಾ ತಿಂಗಳ ಋತುಚಕ್ರ ರಜೆಯನ್ನು ಆಯಾ ತಿಂಗಳಿನಲ್ಲಿಯೇ ಬಳಿಸಿಕೊಳ್ಳಬೇಕು, ಮತ್ತು ಋತುಚಕ್ರ ರಜೆ ಪಡೆಯಲು ಮಹಿಳಾ ನೌಕರರು ಯಾವುದೇ ವೈದ್ಯಕೀಯ ಪ್ರಮಾಣ ಪತ್ರ ಒದಗಿಸುವ ಅವಶ್ಯಕತೆ ಇರುವುದಿಲ್ಲ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
