ರಾಯಚೂರು ಜನವರಿ 20 (ಕರ್ನಾಟಕ ವಾರ್ತೆ): ಪ್ರತಿಯೊಂದು ಇಲಾಖೆಗಳು ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮಗಳನ್ನು ಮಾರ್ಚ್ ಅಂತ್ಯಕ್ಕೆ ಶೇ.100ರಷ್ಟು ಅನುಷ್ಠಾನಗೊಳಿಸಬೇಕೆಂದು ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಜನವರಿ 20ರ ಮಂಗಳವಾರ ದಂದು ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಗಿರಿಜನ ಉಪಯೋಜನೆ ಕಾರ್ಯಕ್ರಮಗಳ ಅನುಷ್ಠಾನದ ಕುರಿತು ಡಿಸೆಂಬರ್-2025ರ ಅಂತ್ಯದವರೆಗಿನ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪ ಯೋಜನೆ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ನಿರ್ಲಕ್ಷ್ಯ ತೋರದೆ ಹಾಗೂ ಕಳಪೆ ಸಾಧನೆ ಮಾಡದೆ. ನಿಗದಿತ ಕಾಲದಲ್ಲಿ ಕಾಯಕ್ರಮಗಳನ್ನು ಪೂರ್ಣಗೊಳಿಸಬೇಕು. ಪೂರ್ಣಗೊಳಿಸದೆ ಕಳಪೆ ಸಾಧನೆಗೈದಿರುವ ಇಲಾಖೆಗಳಿಗೆ ವಿವರಣೆ ಕೋರಿ ಪತ್ರ ಬರೆಯುವಂತೆ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೃಷಿ ಇಲಾಖೆಯಿಂದ ಬೀಜ ಪೂರೈಕೆ, ಕೃಷಿ ಯಾಂತ್ರೀಕರಣ, ಕೃಷಿ ಸಂಸ್ಕರಣೆ, ಕರ್ನಾಟಕ ರೈತ ಸಮೃದ್ಧಿ, ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯ ಸೇರಿದಂತೆ ಇತರೆ ಯೋಜನೆಗಳ ಕುರಿತು ಸಾರ್ವಜನಿಕರಿಗೆ ಅಗತ್ಯ ಮಾಹಿತಿ ನೀಡಿ ಯೋಜನೆಯ ಲಾಭವನ್ನು ಪಡೆಯುವಂತೆ ನೋಡಿಕೊಳ್ಳಬೇಕು. ಅಲ್ಲದೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ರಾಷ್ಟ್ರೀಯ ಪೌಷ್ಟಿಕ ಆಹಾರ ಯೋಜನೆ, ಐಸಿಡಿಎಸ್ ಸರಿಯಾಗಿ ಅನುಷ್ಠಾನ ಮಾಡಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.
ದೇವದಾಸಿ ಮಹಿಳೆಯರ ಪುನರ್ವಸತಿ ಆದಾಯೋತ್ಪನ್ನಕರ ಚಟುವಟಿಕೆಗೆ ಬಿಡುಗಡೆಯಾದ ಅನುದಾನ ಸರಿಯಾಗಿ ಪೂರ್ಣ ಪ್ರಮಾಣದಲ್ಲಿ ಬಳಕೆ ಮಾಡಿಕೊಳ್ಳಬೇಕು. ಶಾಲಾ ಶಿಕ್ಷಣ ಇಲಾಖೆಯಿಂದ ನೀಡಲಾಗುವ ಶುಲ್ಕ ಮರುಪಾವತಿ ಧನಸಹಾಯವನ್ನು ಕಾಲಕಾಲಕ್ಕೆ ನೀಡಬೇಕು. ಜಿಲ್ಲೆಯ ಎಲ್ಲಾ ಸ್ಥಳೀಯ ಸಂಸ್ಥೆಗಳಿಂದ ಅನುಷ್ಠಾನಗೊಳ್ಳಲಾಗುವು ವಿವಿಧ ಕಾರ್ಯಕ್ರಮಗಳಡಿ ಅರ್ಹ ಫಲಾನುಭವಿಗಳನ್ನು ಆದಷ್ಟೂ ಬೇಗನೇ ಆಯ್ಕೆ ಮಾಡಬೇಕು. ಹಾಗೂ ಕಾಲಕಾಲಕ್ಕೆ ವಿವಿಧ ವಿವಿಧ ಸೌಲಭ್ಯಗಳ ಕುರಿತು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಬೇಕೆಂದರು.
ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ರೋಗಿಗಳಿಗೆ ಉಚಿತವಾಗಿ ಗುಣಮಟ್ಟದ ಚಿಕಿತ್ಸೆ ನೀಡಬೇಕು. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜನಾಂಗದವರು ವಾಸಿಸುವ ಕಾಲೋನಿ ಅಥವಾ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯ ರಚನೆ ಹಾಗೂ ಮೂಲಭೂತ ಸೌಕರ್ಯ ಬಲಪಡಿಸಲು ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಕ್ರಮವಹಿಸಬೇಕು ಎಂದರು.
ಸಮಸ್ಯೆಗಳನ್ನು ಆಲಿಸಿ: ಜಿಲ್ಲೆಯಲ್ಲಿ ಪರಿಶಿಷ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ಸಮಸ್ಯೆಗಳನ್ನು ಆಲಿಸಿ, ಅವುಗಳಿಗೆ ಶೀಘ್ರವಾಗಿ ಪರಿಹಾರ ಒದಗಿಸುವುದು ಅಧಿಕಾರಿಗಳ ಕರ್ತವ್ಯ ಇದರಲ್ಲಿ ಯಾವುದೇ ಲೋಪ ಕಂಡುಬಂದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ಸೂಕ್ತ ರೀತಿಯಲ್ಲಿ ಕ್ರಮಕೈಗೊಳ್ಳಲಾಗುವುದು. ಅಲ್ಲದೆ ಕಚೇರಿಗೆ ಸರಿಯಾದ ಸಮಯಕ್ಕೆ ಅಧಿಕಾರಿ, ಸಿಬ್ಬಂದಿಗಳು ಹಾಜರಾಗಬೇಕು. ಕಚೇರಿಗೆ ಸರಿಯಾದ ಸಮಯಕ್ಕೆ ಬರದಿರುವ ಕುರಿತು ದೂರಗಳು ಕೇಳಿ ಬರುತ್ತಿವೆ. ಕೂಡಲೇ ಅಧಿಕಾರಿಗಳು ಎಚ್ಚರಗೊಳ್ಳಬೇಕು. ಸಾರ್ವಜನಿಕರ ಕುಂದುಕೊರತೆಗಳನ್ನು ಅಲಿಸಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.
ಪ್ರಸ್ತವಾನೆ ಸಲ್ಲಿಸಲು ಸೂಚನೆ: ವಿವಿಧ ಇಲಾಖೆಗಳಿಂದ ಅನುಷ್ಠಾನ ಮಾಡುತ್ತಿರುವ ಎಸ್.ಎಸ್.ಪಿ/ಟಿ.ಎಸ್.ಪಿ ಕಾರ್ಯಕ್ರಮಗಳಿಗೆ 2026-27ನೇ ಸಾಲಿಗೆ ಕರಡು ಆಯವ್ಯಯ ಪ್ರಸ್ತಾವನೆ ಸಿದ್ಧಪಡಿಸಲು ಜಿಲ್ಲಾ ಮೇಲ್ವಿಚಾರಣಾ ಸಮಿತಿಗಳು ಅನುಸೂಚಿತ ಜಾತಿಗಳು ಅಥವಾ ಅನುಸೂಚಿತ ಬುಡಕಟ್ಟುಗಳ ಸಮುದಾಯದ ಪ್ರತಿನಿಧಿಗಳೊಂದಿಗೆ ಸಮಾಲೋಚಿಸುವುದರ ಜೊತೆಗೆ ಯಾವುದಾದರೂ ಪ್ರಸ್ತಾವನೆಗಳು ಸಲಹೆಗಳು ಇದ್ದರೆ 2026ರ ಜನವರಿ 23ರೊಳಗಾಗಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಈಶ್ವರ ಕುಮಾರ್ ಕಾಂದೂ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಸಿಂಧೂರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ನವೀನ್ ಕುಮಾರ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿರೇಶ್ ನಾಯಕ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಸುರೇಂದ್ರ ಬಾಬು, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರಾದ ನಜೀರ್ ಅಹಮದ್, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಮಹಮ್ಮದ್ ಅಲಿ, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಶರಣಪ್ಪ, ರಿಮ್ಸ್ ಸಂಸ್ಥೆಯ ನಿರ್ದೇಶಕ ಡಾ.ರಮೇಶ ಬಿ.ಕೆ., ಆದಿಜಾಂಬವ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ರಾಜೇಂದ್ರ ಜಲ್ದಾರ್, ಕೃಷಿ ಇಲಾಖೆಯ ಉಪ ನಿರ್ದೇಶಕ ನಹೀಂ ಹುಸೇನ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಇದ್ದರು.

Leave a Reply

Your email address will not be published. Required fields are marked *