ಸಂಸದರ ಪ್ರಾದೇಶಾಭಿವೃದ್ಧಿ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ
ಸಿಂಧನೂರು : ಸಂಸದ ಪ್ರಾದೇಶಾಭಿವೃದ್ಧಿ ಅನುದಾನ (MPLADS) ಯೋಜನೆಯಡಿ ಕ್ಷೇತ್ರದಲ್ಲಿ ವಿವಿಧೆಡೆ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯನ್ನು ಇಂದು ರಾಯಚೂರು ಸಂಸದರಾದ ಕುಮಾರ ನಾಯಕ ರವರ ಕಾರ್ಯಾಲಯದಲ್ಲಿ ನಡೆಸಲಾಯಿತು.
ಸಭೆಯಲ್ಲಿ ವಿವಿಧ ಇಲಾಖೆಗಳಿಂದ ಕೈಗೊಳ್ಳಲಾಗಿರುವ ಕಾಮಗಾರಿಗಳ ಪ್ರಸ್ತುತ ಹಂತ, ತಾಂತ್ರಿಕ ಗುಣಮಟ್ಟ, ವೆಚ್ಚದ ಸಮರ್ಪಕ ಬಳಕೆ ಹಾಗೂ ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸುವ ಕುರಿತು ಸುದೀರ್ಘ ಚರ್ಚೆ ನಡೆಯಿತು. ಕಾಮಗಾರಿಗಳಲ್ಲಿ ಯಾವುದೇ ರೀತಿಯ ಗುಣಮಟ್ಟದ ಕೊರತೆ ಕಂಡುಬರಬಾರದು, ಸಾರ್ವಜನಿಕ ಹಣವನ್ನು ಪಾರದರ್ಶಕವಾಗಿ ಹಾಗೂ ಪರಿಣಾಮಕಾರಿಯಾಗಿ ಬಳಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಲಾಯಿತು.
ಅಪೂರ್ಣ ಹಾಗೂ ವಿಳಂಬವಾಗುತ್ತಿರುವ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಸೂಚಿಸಲಾಯಿತಲ್ಲದೆ, ಕಾಮಗಾರಿ ನಡೆಯುವ ಸ್ಥಳಗಳಲ್ಲಿ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು, ಸ್ಥಳೀಯ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆ ಉಂಟಾಗದಂತೆ ಕಾರ್ಯ ನಿರ್ವಹಿಸುವಂತೆ ಸಭೆಯಲ್ಲಿ ಸ್ಪಷ್ಟ ನಿರ್ದೇಶನ ನೀಡಲಾಯಿತು.
ಪ್ರತಿ ಇಲಾಖೆಯ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಕಾಮಗಾರಿಗಳ ಪ್ರಗತಿ ವರದಿಯನ್ನು ಸಭೆಗೆ ಸಲ್ಲಿಸಿ ಮಾಹಿತಿ ನೀಡಿದರು. ಭವಿಷ್ಯದಲ್ಲಿ ಇಂತಹ ಸಭೆಗಳನ್ನು ನಿಯಮಿತವಾಗಿ ನಡೆಸಿ ಪ್ರಗತಿ ಪರಿಶೀಲನೆ ಮಾಡಲಾಗುವುದು ಎಂದು ತಿಳಿಸಲಾಯಿತು.
ಈ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕ್ಯಾಶ್ವೊಟೆಕ್ ಇಲಾಖೆಯ ಯೋಜನಾ ನಿರ್ದೇಶಕರು, ನಿರ್ಮಿತಿ ಕೇಂದ್ರದ ಸಹಾಯಕ ಅಭಿಯಂತರರು, KRIDL ಇಲಾಖೆ ಹಾಗೂ PRED ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದು, ಪರಸ್ಪರ ಸಮನ್ವಯದೊಂದಿಗೆ ಅಭಿವೃದ್ಧಿ ಕಾಮಗಾರಿಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದರು.
