ರಾಯಚೂರು ಜನವರಿ 24 (ಕರ್ನಾಟಕ ವಾರ್ತೆ): ತಾಲೂಕಿನ ಮಟಮಾರಿ ಗ್ರಾಮ ಪಂಚಾಯತ್ ವತಿಯಿಂದ ಮಟಮಾರಿ ಗ್ರಾಮದಲ್ಲಿ ಜನವರಿ 23ರ ಶುಕ್ರವಾರ ದಂದು ಗ್ರಾಮ ಪಂಚಾಯತ್ ವಿವಿಧ ಯೋಜನೆಗಳ ಕುರಿತು ತ್ರೈಮಾಸಿಕ ಪ್ರಗತಿ ಪರಿಶೀಲನಾ (ಕೆಡಿಪಿ) ಸಭೆಯನ್ನು ಯಶಸ್ವಿಯಾಗಿ ನಡೆಸಲಾಯಿತು.
ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷೆ ಅಂಬಿಕಾ ಪ್ರಭುರಾಜ ಅವರ ಅಧ್ಯಕ್ಷತೆಯಲ್ಲಿ ಹಾಗೂ ಉಪಾಧ್ಯಕ್ಷರು ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷರಾದ ಹುಸೇನ್ ಬಾಷಾ ಅವರ ಮಾರ್ಗದರ್ಶನದಲ್ಲಿ ನಡೆಸಲಾಯಿತು.
ಸಭೆಯಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಕ್ರಮವಾಗಿ ಆಹ್ವಾನಿಸಿ, ತಮ್ಮ ತಮ್ಮ ಇಲಾಖೆಗಳ ಪ್ರಗತಿ ವರದಿ, ಮುಂದಿನ ಕಾರ್ಯಯೋಜನೆಗಳು ಹಾಗೂ ಅನುಷ್ಠಾನದಲ್ಲಿರುವ ಕಾಮಗಾರಿಗಳ ಸ್ಥಿತಿಗತಿಗಳ ಕುರಿತು ಸವಿಸ್ತಾರವಾಗಿ ಚರ್ಚೆ ನಡೆಸಲಾಯಿತು.
ಈ ವೇಳೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಹುಸೇನ್ ಬಾಷಾ ಅವರು ಮಾತನಾಡಿ, ಸಾರ್ವಜನಿಕರೇ ಸರ್ಕಾರದ ಎಲ್ಲಾ ಇಲಾಖೆಗಳ ಮೂಲಾಧಾರ ಮತ್ತು ಹಕ್ಕುದಾರರು ಎಂಬ ಮನೋಭಾವದಿಂದ ಪ್ರತಿಯೊಬ್ಬ ಅಧಿಕಾರಿ ಸೇವಾಮನೋಭಾವದಿಂದ ಕಾರ್ಯನಿರ್ವಹಿಸಬೇಕು. ಎಲ್ಲಾ ಇಲಾಖೆಗಳು ಸಾರ್ವಜನಿಕರ ಹಿತಾಸಕ್ತಿಯನ್ನು ಕೇಂದ್ರಬಿಂದುಗೊಳಿಸಿ ಕಾರ್ಯನಿರ್ವಹಿಸಬೇಕು. ಹಾಗೂ ಸರ್ಕಾರದ ಯೋಜನೆಗಳ ಕುರಿತು ಜನಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಫಲಾನುಭವಿಗಳಿಗೆ ಯೋಜನೆಗಳ ಸದುಪಯೋಗ ತಲುಪುವಂತೆ ಕ್ರಮವಹಿಸಬೇಕು ಎಂದರು.
ಶಿಕ್ಷಣ ಇಲಾಖೆಯ ಕುರಿತು ಅವರು ಉಲ್ಲೇಖಿಸಿ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಒದಗಿಸಿದಲ್ಲಿ ಮಾತ್ರ 10ನೇ ತರಗತಿಯಲ್ಲಿ ಉತ್ತಮ ಫಲಿತಾಂಶ ಸಾಧ್ಯವಾಗುತ್ತದೆ. ಗುಣಮಟ್ಟದ ಶಿಕ್ಷಣವೇ ಸುಶಿಕ್ಷಿತ ಮತ್ತು ಸದೃಢ ಸಮಾಜ ನಿರ್ಮಾಣಕ್ಕೆ ದಾರಿ ಮಾಡಿಕೊಡುತ್ತದೆ ಎಂದು ಅಭಿಪ್ರಾಯಪಟ್ಟರು.
ಸಾರ್ವಜನಿಕರಿಗೆ ಉತ್ತಮ ಚಿಕಿತ್ಸೆ, ಸಮಯೋಚಿತ ಸ್ಪಂದನೆ ಹಾಗೂ ರೋಗಿಗಳೊಂದಿಗೆ ಶಿಷ್ಟಾಚಾರಪೂರ್ಣ ಮತ್ತು ಮಾನವೀಯ ವರ್ತನೆ ಕಡ್ಡಾಯವಾಗಿರಬೇಕು. ಎಲ್ಲಾ ಸರ್ಕಾರಿ ಕಚೇರಿ ಆವರಣಗಳು, ಪ್ರಮುಖ ರಸ್ತೆ ಬದಿಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಗಿಡ ನೆಡುವ ಕಾರ್ಯಕ್ರಮಗಳನ್ನು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ನಿರ್ದೇಶನ ನೀಡಿದರು.
ಕಂದಾಯ ಇಲಾಖೆಯಿಂದ ಗ್ರಾಮ ಲೆಕ್ಕಾಧಿಕಾರಿಗಳು ಪಿಂಚಣಿ, ಕೃಷಿ ಭೂಮಿ ವರ್ಗಾವಣೆ ಸೇರಿದಂತೆ ವಿವಿಧ ಕಂದಾಯ ಸೇವೆಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡುವ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಿ, ಜನರಿಗೆ ಸುಲಭವಾಗಿ ಸೇವೆಗಳು ಲಭ್ಯವಾಗುವಂತೆ ಕ್ರಮವಹಿಸಬೇಕು ಎಂದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಅಂಗನವಾಡಿ ಮಕ್ಕಳಿಗೆ ಪೌಷ್ಟಿಕ ಆಹಾರ ಒದಗಿಸುವುದು, ಗುಣಮಟ್ಟದ ಪೂರ್ವ ಪ್ರಾಥಮಿಕ ಶಿಕ್ಷಣ ನೀಡುವುದು. ಹಾಗೂ ಮಹಿಳಾ ಸಬಲೀಕರಣಕ್ಕೆ ಸಂಬಂಧಿಸಿದ ಜಾಗೃತಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರುವಂತೆ ಸೂಚಿಸಲಾಯಿತು.
ಸಭೆಯ ಅಂತ್ಯದಲ್ಲಿ ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿ, ಸಾರ್ವಜನಿಕರ ಹಿತಾಸಕ್ತಿಗೆ ಆದ್ಯತೆ ನೀಡುತ್ತಾ ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ನಿರ್ದೇಶನ ನೀಡಲಾಯಿತು.
ಇದೇ ಸಂದರ್ಭದಲ್ಲಿ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಹುಲಿಗೆಮ್ಮ ನರಸಣ್ಣ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶೇಖರಪ್ಪ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಸಭೆಯಲ್ಲಿ ಇದ್ದರು.


