ರಾಯಚೂರು ಜನವರಿ 25 (ಕರ್ನಾಟಕ ವಾರ್ತೆ): ಇಲ್ಲಿನ ಜಿಲ್ಲಾಡಳಿತದಿಂದ ಭಾರತ ಚುನಾವಣಾ ಆಯೋಗದ ಸಹಯೋಗದಲ್ಲಿ ಜನವರಿ 25ರಂದು ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವು ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ನಡೆಯಿತು.
ಹಿರಿಯ ಶ್ರೇಣಿಯ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಹೆಚ್.ಎ.ಸಾತ್ವಿಕ್ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಚುನಾವಣೆ ಸಂದರ್ಭದಲ್ಲಿ, 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರು ಮತದಾನ ಮಾಡುವುದು ಸಾಂವಿಧಾನಿಕ ಹಕ್ಕು ಮತ್ತು ಕರ್ತವ್ಯವಾಗಿದೆ. ಪ್ರಜಾಪ್ರಭುತ್ವದ ಸುಭದ್ರತೆಗಾಗಿ ಅರ್ಹ ದೇಶದ ಪ್ರತಿಯೊಬ್ಬ ಪ್ರಜೆಯೂ ಮತದಾನ ಪ್ರಕ್ರಿಯಲ್ಲಿ ಭಾಗವಹಿಸಬೇಕು. ಸಂವಿಧಾನದತ್ತವಾಗಿ ದೊರೆತಿರುವ ಮತದಾನದ ಹಕ್ಕನ್ನು ಅರಿತು ಸ್ವಂತ ವಿವೇಚನೆಯಿಂದ ಮತದಾನ ಮಾಡಬೇಕು ಎಂದು ಸಲಹೆ ಮಾಡಿದರು.
ಜಿಲ್ಲಾಧಿಕಾರಿಗಳಾದ ನಿತೀಶ್ ಕೆ ಅವರು ಮಾತನಾಡಿ, ಯುವ ಮತದಾರರ ನೋಂದಣಿ ಹಾಗೂ ಮತದಾನಕ್ಕೆ ಪ್ರೋತ್ಸಾಹಿಸಲು ಮತ್ತು ಜಾಗೃತಿ ಮೂಡಿಸಲು ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಪ್ರಜಾಪ್ರಭುತ್ವದಲ್ಲಿ ಪ್ರಜೆಗಳಿಗೆ ಮಹತ್ವದ ಸ್ಥಾನ ನೀಡಲಾಗಿದೆ. ಮತದಾನದ ಮಹತ್ವವನ್ನು ಅರಿತು ಪ್ರತಿಯೊಬ್ಬರು ಮತದಾನ ಪ್ರಕ್ರಿಯೆಯಲ್ಲಿ ಭಾಗಿಯಾಗಬೇಕು ಎಂದು ಸಲಹೆ ಮಾಡಿದರು.
ವಿಜೇತರಿಗೆ ಪ್ರಮಾಣಪತ್ರ: ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಿಗೆ ಇದೆ ವೇಳೆ ಪ್ರಮಾಣಪತ್ರ ವಿತರಿಸಲಾಯಿತು.
ಇದಕ್ಕೂ ಮೊದಲು, ಅಪರ ಜಿಲ್ಲಾಧಿಕಾರಿಗಳಾದ ಶಿವಾನಂದ ಅವರಿಂದ ಪ್ರತಿಜ್ಞಾವಿಧಿ ಬೋಧಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ್ ಕುಮಾರ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ, ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತರಾದ ಜುಬಿನ್ ಮೊಹಪಾತ್ರ, ರಾಯಚೂರು ಸಹಾಯಕ ಆಯುಕ್ತರಾದ ಡಾ.ಹಂಪಣ್ಣ ಸಜ್ಜನ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ, ರಾಯಚೂರು ತಹಶೀಲ್ದಾರ್ ಸುರೇಶ್ ವರ್ಮ, ರಾಯಚೂರು ಮಹಾನಗರ ಪಾಲಿಕೆಯ ಉಪ ಆಯುಕ್ತರಾದ ಸಂತೋಷ ರಾಣಿ ಸೇರಿದಂತೆ ಇತರರು ಇದ್ದರು. ದಂಡಪ್ಪ ಬಿರಾದಾರ ನಿರೂಪಿಸಿದರು. ಸದ್ದಾಶಿವಪ್ಪ ವಂದಿಸಿದರು.


