ಯಚೂರು ಜನವರಿ 28 (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಫೆ.05 ರಿಂದ ಫೆ.07ರವರೆಗೆ ನಿಗದಿಯಾದ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ-2026ರಲ್ಲಿ ಫೆ.07ರಂದು ಹಮ್ಮಿಕೊಂಡ ಜಿಲ್ಲಾ ಮಟ್ಟದ ಗ್ಯಾರಂಟಿ ಸಮಾವೇಶ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯುವಂತೆ ಗ್ಯಾರಂಟಿ ಯೋಜನೆಗೆ ಸಂಬಂಧಿಸಿದ ಬೇರೆ ಬೇರೆ ಇಲಾಖೆಗಳ ಅಧಿಕಾರಿಗಳು ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಪಾಮಯ್ಯ ಮುರಾರಿ ಅವರು ಹೇಳಿದರು.
ಜನವರಿ 28ರ ಬುಧವಾರ ನಗರದ ಜಿಲ್ಲಾ ಪಂಚಾಯತಿಯ ಜಲ ನಿರ್ಮಲ ಸಭಾಂಗಣದಲ್ಲಿ ನಡೆದ ಗ್ಯಾರಂಟಿ ಸಮಾವೇಶದ ಸಿದ್ಧತೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು, ಜಿಲೆಯ ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರು ಹಾಗೂ ರಾಜ್ಯ ಉಪಾಧ್ಯಕ್ಷರು, ಜಿಲೆಯ ಎಲ್ಲ ಜನಪ್ರತಿನಿಧಿಗಳು ಸೇರಿದಂತೆ ಜಿಲ್ಲಾ ಹಾಗೂ ರಾಯಚೂರು, ಮಾನವಿ, ಸಿಂಧನೂರ, ಮಸ್ಕಿ, ಲಿಂಗಸೂರು, ದೇವದುರ್ಗ, ಸಿರವಾರ ಸೇರಿದಂತೆ ವಿವಿಧ ತಾಲೂಕುಗಳ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಭಾಗವಹಿಸಲಿದ್ದಾರೆ. ರಾಯಚೂರು ಜಿಲ್ಲೆ ಮತ್ತು ತಾಲೂಕುವಾರು ವಿವಿಧ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಪ್ರಸ್ತುತ ಅವಧಿವರೆಗೂ ಸಾಧಿಸಿರುವ ಪ್ರಗತಿಯ ವಿವರಗಳ ಮಾಹಿತಿಯನ್ನು ವಿಡಿಯೋ ಸಾಕ್ಷ್ಯಚಿತ್ರಗಳ ಮೂಲಕ ಪ್ರದರ್ಶಿಸುವ ಕಾರ್ಯ ಮಾಡಬೇಕು ಎಂದು ತಿಳಿಸಿದರು.
ರಾಯಚೂರು ಜಿಲ್ಲೆಯಲ್ಲಿನ ಗ್ಯಾರಂಟಿ ಯೋಜನೆಯಗಳ ಫಲಾನುಭವಿಗಳ ಯಶೋಗಾಥೆಯ ಬಗ್ಗೆ ನಾವು ತಿಳಿದುಕೊಳ್ಳಬೇಕು. ಅದು ಇತರರಿಗೆ ಪ್ರೇರಣೆಯಾಗಬೇಕು. ಮುಖ್ಯವಾಗಿ ಗ್ಯಾರಂಟಿ ಯೋಜನೆಗಳ ಆಶಯ ಮತ್ತು ಆಯಾ ಯೋಜನೆಗಳ ಬಗ್ಗೆ ಜನತೆಗೆ ತಿಳಿಸಲು ಅರ್ಹರು ಈ ಯೋಜನೆಯ ವ್ಯಾಪ್ತಿಗೆ ಬರಬೇಕು ಎನ್ನುವ ಪ್ರಮುಖ ಉದ್ದೇಶದೊಂದಿಗೆ ಫೆ.07ರಂದು ಜಿಲ್ಲಾ ಮಟ್ಟದ ಗ್ಯಾರಂಟಿ ಸಮಾವೇಶ ಹಮ್ಮಿಕೊಳ್ಳಲಾಗಿದೆ.
ಜಿಲ್ಲೆಯ ವಿವಿಧೆಡೆ ಇರುವ ವಿವಿಧ ಗ್ಯಾರಂಟಿ ಯೋಜನೆಗಳ ಸಾಧಕ ಫಲಾನುಭವಿಗಳನ್ನು ಕೂಡಲೇ ಗುರುತಿಸಬೇಕು. ಪ್ರತಿ ತಾಲೂಕಿನಿಂದ ಕನಿಷ್ಠ 25 ಸಾಧಕ ಮಹಿಳಾ ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಸಮಾವೇಶಕ್ಕೆ ಆಹ್ವಾನಿಸಿ ಪ್ರಶಸ್ತಿ ನೀಡಿ ಸನ್ಮಾನಿಸಿ ಗೌರವಿಸುವ ಕಾರ್ಯ ಮಾಡಬೇಕು. ಈ ಕಾರ್ಯಕ್ಕೆ ಸಂಬಂಧಿಸಿದ ವಿವಿಧ ಇಲಾಖೆಗಳ ಅಧಿಕಾರಿಗಳು ಆದ್ಯತೆ ನೀಡಿ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.
ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಯಶೋಗಾಥೆಯ ಸಾಕ್ಷ್ಯಚಿತ್ರಗಳ ಪ್ರದರ್ಶನದ ಜೊತೆಗೆ ಸಾಧಕ ಫಲಾನುಭವಿಗಳ ಅಭಿಪ್ರಾಯದ ವಿಡಿಯೋ ಪ್ರದರ್ಶಿಸಬೇಕು. ಗ್ಯಾರಂಟಿ ಯೋಜನೆಗಳ ಯಶೋಗಾಥೆಯ ಕುರಿತು ನಾಟಕ ಪ್ರದರ್ಶನ ಸೇರಿದಂತೆ ಇತರೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲು ಅಗತ್ಯ ಕ್ರಮವಹಿಸಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯ ಸ್ವ-ಸಹಾಯ ಗುಂಪುಗಳು ಉತ್ಪಾದಿಸುವ ಉತ್ಪನ್ನಗಳು ಸೇರಿದಂತೆ, ಸ್ಥಳೀಯ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಆಯೋಜನೆ ಮಾಡಬೇಕೆಂದರು.
ಇದೇ ಸಂದರ್ಭದಲ್ಲಿ ರಾಯಚೂರು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಪವನ್ ಕಿಶೋರ್ ಪಾಟೀಲ್, ಜಿಲ್ಲಾ ಉಪಾಧ್ಯಕ್ಷರಾದ ಶಂಕರಗೌಡ ತುರ್ವಿಹಾಳ, ಹನುಮಂತಪ್ಪ ಜಾಲಿಬೆಂಚಿ, ಸದಸ್ಯರಾದ ಲಕ್ಷ್ಮಣ ಜ್ಯೋತಿ, ಮೆಹೆಬೂಬ್ ಸಾಬ್, ವೆಂಕಟೇಶ, ಆದನಗೌಡ, ಹೆಚ್.ಬಸವರಾಜ್, ಶೇಖರಪ್ಪ ಯಾದವ್, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕುಮಾರ್ ಕಾಂದೂ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಡಾ.ಟಿ.ರೋಣಿ, ಸಿಡಾಕ್ ಜಂಟಿ ನಿರ್ದೇಶಕ ಜಿ.ಯು.ಹುಡೇದ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ನವೀನ್ ಕುಮಾರ್, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ಚಂದ್ರಶೇಖರ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರಾದ ನಜೀರ್ ಅಹಮದ್, ಜೆಸ್ಕಾಂ ಇಲಾಖೆಯ ಅಧಿಕಾರಿ ಚಂದ್ರಶೇಖರ ದೇಸಾಯಿ, ಜಿಲ್ಲಾ ಉದ್ಯೋಗಾಧಿಕಾರಿ ನವೀನ್ ಕುಮಾರ್ ಸಂಗೇಪಾಗ ಸೇರಿದಂತೆ ರಾಯಚೂರು, ಮಾನ್ವಿ, ಸಿಂಧನೂರ, ಮಸ್ಕಿ, ಲಿಂಗಸೂರು, ಸಿರವಾರ, ಅರಕೇರಾ ಮತ್ತು ದೇವದುರ್ಗ ತಾಲೂಕುಗಳ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಸಭೆಯಲ್ಲಿ ಇದ್ದರು.
ಶುಲ್ಕ ಮರುಪಾವತಿಗೆ ತಾಂತ್ರಿಕ ಕಾರಣ ಬಗೆಹರಿಸಲು ಅವಕಾಶ
ರಾಯಚೂರು ಜನವರಿ 28 (ಕರ್ನಾಟಕ ವಾರ್ತೆ): ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2020-21, 2021-22, 2022-23, 2023-24, 2024-25 ಮತ್ತು 2025-26ನೇ ಸಾಲಿನ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಕಾರ್ಯಕ್ರಮಕ್ಕಾಗಿ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಮೂಲಕ ಅರ್ಜಿ ಸಲ್ಲಿಸಿರುವ ಕೆಲವೊಂದು ವಿದ್ಯಾರ್ಥಿಗಳಿಗೆ ತಾಂತ್ರಿಕ ಕಾರಣಗಳಿಂದ ವಿದ್ಯಾರ್ಥಿವೇತನ ಅಥವಾ ಶುಲ್ಕ ಮರುಪಾವತಿ ಮಾಡಲು ಸಾಧ್ಯವಾಗುತ್ತಿಲ್ಲ.
ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿಕೊಳ್ಳದೆ ಇರುವುದು. ವಿದ್ಯಾರ್ಥಿಗಳ ಶೈಕ್ಷಣಿಕ ದತ್ತಾಂಶದಲ್ಲಿ ಹಾಗೂ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದಲ್ಲಿ ನಮೂದಿಸಿರುವ ಹೆಸರಿಗೂ ವ್ಯತ್ಯಾಸವಿರುವುದು. ಕೌನ್ಸೆಲಿಂಗ್ ಕೋರ್ಸ್ಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಕೌನ್ಸೆಲಿಂಗ್ ದತ್ತಾಂಶ ನಮೂದಿಸದೇ ಇರುವುದು. ವಿದ್ಯಾರ್ಥಿಗಳ ಹಿಂದಿನ ಶೈಕ್ಷಣಿಕ ವರ್ಷದ ದತ್ತಾಂಶವನ್ನು ವಿಶ್ವವಿದ್ಯಾಲಯಗಳು ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದೊಂದಿಗೆ ಹಂಚಿಕೊಳ್ಳದೇ ಇರುವುದು.
ಈ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಿ, ಮಾಹಿತಿಯನ್ನು ಅಪ್‌ಡೇಟ್ ಮಾಡಲು ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ ವಿದ್ಯಾರ್ಥಿಗಳ ಲಾಗಿನ್, ತಾಲ್ಲೂಕು/ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಲಾಗಿನ್‌ನಲ್ಲಿ ಅವಕಾಶ ನೀಡಲಾಗಿರುತ್ತದೆ.
ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ತಿಳಿಸಿದೆ. ಒಂದು ವೇಳೆ ದಿನಾಂಕ 30-01-2026ರ ಒಳಗಾಗಿ ವಿದ್ಯಾರ್ಥಿಗಳು ತಮ್ಮ ಮಾಹಿತಿಯನ್ನು ಅಪ್‌ಡೇಟ್ ಮಾಡದೇ ಇದ್ದಲ್ಲಿ ಅಂತಹ ವಿದ್ಯಾರ್ಥಿಗಳ ಅರ್ಜಿಗಳನ್ನು ತಿರಸ್ಕರಿಸಲಾಗುವುದು ಎಂದು ರಾಯಚೂರು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Leave a Reply

Your email address will not be published. Required fields are marked *