ರಾಯಚೂರು ಜನವರಿ 28 (ಕ.ವಾ.): ನಗರದ ಜಿಲ್ಲಾ ಪಂಚಾಯತಿಯ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪಂಚಾಯತ ಅಭಿವೃದ್ಧಿ ಅಧಿಕಾರಿಗಳ ಶ್ರೇಷ್ಠ ಸೇವೆಯನ್ನು ಗುರುತಿಸಿ, ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರತಿ ತಿಂಗಳ ಕಾರ್ಯಕ್ಷಮತೆಯ ಆಧಾರದ ಮೇಲೆ ಅತ್ಯುತ್ತಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಎಂದು ಪ್ರಶಂಶನೀಯ ಪ್ರಮಾಣ ಪತ್ರ ನೀಡಲಾಗುತ್ತದೆ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಈಶ್ವರ್ ಕಾಂದೂ ಅವರು ತಿಳಿಸಿದರು.
ನಗರದ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಜನವರಿ 28ರಂದು ನಡೆದ ನರೇಗಾ ಸೇರಿ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ, ಮಸ್ಕಿ ತಾಲ್ಲೂಕಿನ ಉದ್ಬಾಳ (ಯು) ಗ್ರಾಮ ಪಂಚಾಯತಿಯ ಡಿಸೆಂಬರ್-2025ರ ಮಾಹೆಯಲ್ಲಿ ವಿವಿಧ ಯೋಜನೆಗಳಲ್ಲಿ ಪ್ರಗತಿ ಸಾಧಿಸಿದ ಅತ್ಯುತ್ತಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಎಂದು ಆಯ್ಕೆಯಾದ ಬಸವರಾಜು ಅವರಿಗೆ ಪ್ರಶಂಶನೀಯ ಪ್ರಮಾಣ ಪತ್ರ ವಿತರಿಸಿ ಅವರು ಮಾತನಾಡಿದರು.
ಬಸವರಾಜು ಅವರ ರೀತಿಯಲ್ಲಿ ಮುಂಬರುವ ದಿನಗಳಲ್ಲಿ ಮತ್ತೊಬ್ಬ ಪಿಡಿಓ ಅವರ ಕಾರ್ಯಕ್ಷಮತೆಯನ್ನು ಪರಿಗಣಿಸಿ ಪ್ರಶಸ್ತಿ ನೀಡಲಾಗುತ್ತದೆ. ಪ್ರಶಸ್ತಿ ನೀಡುವುದರಿಂದ ಅವರು ಇನ್ನೂ ಹೆಚ್ಚಿನ ರೀತಿಯಲ್ಲಿ ಕೆಲಸ ಮಾಡಲು ಉತ್ತೇಜನ ನೀಡಲಾಗುತ್ತದೆ ಎಂದರು.
ಇದೆ ವೇಳೆ ಜಿಲ್ಲಾ ಪಂಚಾಯತ್‌ನ ಉಪ ಕಾರ್ಯದರ್ಶಿ ಹಾಲಸಿದ್ದಪ್ಪ ಪೂಜೇರಿ, ಮುಖ್ಯ ಲೆಕ್ಕಾಧಿಕಾರಿ ವಿಜಯಶಂಕರ್, ತಾಪಂಗಳ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರು, ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *