ಮಸ್ಕಿ: ಕಠಿಣ ಪರಿಶ್ರಮದಿಂದ ಅಧ್ಯಯನ ಮಾಡಿದರೆ ಯಾವುದೇ ಕ್ಷೇತ್ರದಲ್ಲಾದರೂ ಯಶಸ್ಸು ಸಾಧಿಸಬಹುದು. ಸಾಧನೆಗೆ ಪರಿಶ್ರಮವೇ ಹೊರತು ಬೇರೆ ಯಾವುದೇ ಶಾರ್ಟ್‌ಕಟ್ ಇಲ್ಲ ಎಂದು ಶಿವದೇವಾನಂದ ಗುರೂಜಿ ಅಭಿಪ್ರಾಯಪಟ್ಟರು.
ಅವರು ಮಸ್ಕಿ ತಾಲೂಕಿನ ತುಂಗಭದ್ರ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ 15ನೇ ವರ್ಷದ ಕಾಲೇಜು ವಾರ್ಷಿಕೋತ್ಸವ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಿಳ್ಕೊಡುಗೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಅಂಕಗಳಷ್ಟೇ ಅಲ್ಲದೆ, ಜೀವನದ ಮೌಲ್ಯಗಳು, ಶಿಸ್ತು ಮತ್ತು ಮಾನವೀಯತೆ ಕೂಡ ವಿದ್ಯಾರ್ಥಿಗಳಲ್ಲಿ ಬೆಳೆಸಿಕೊಳ್ಳುವುದು ಅತ್ಯಂತ ಅಗತ್ಯವಾಗಿದೆ ಎಂದು ತಿಳಿಸಿದರು.
ಮುಖ್ಯ ಅತಿಥಿಯಾಗಿದ್ದ ರಾಯಚೂರು ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಮೌನೇಶ್ ನಾಯಕ್ (ಮಸ್ಕಿ) ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಶಿಸ್ತು ಪ್ರಮುಖ ಪಾತ್ರ ವಹಿಸುತ್ತದೆ. ಆತ್ಮವಿಶ್ವಾಸದಿಂದ ಮುನ್ನಡೆದರೆ ಯಾವುದೇ ಗುರಿಯನ್ನಾದರೂ ಸಾಧಿಸಬಹುದು. ಗುರಿ ಸಾಧನೆಗೆ ನಿರಂತರ ಪ್ರಯತ್ನ ಹಾಗೂ ಏಕಾಗ್ರತೆ ಅಗತ್ಯವಿದೆ. ವಿದ್ಯಾರ್ಥಿಗಳ ಮೇಲೆ ಪಾಲಕರು ಬಹಳಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿರುತ್ತಾರೆ, ಅವುಗಳನ್ನು ಈಡೇರಿಸುವ ಜವಾಬ್ದಾರಿ ಮಕ್ಕಳ ಮೇಲಿದೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಕಾರ್ಯದರ್ಶಿ ರಾಮಣ್ಣ ನಾಯಕ ಮಾತನಾಡಿ, ಶಿಕ್ಷಣದ ಮೂಲಕ ಸಮಾಜದಲ್ಲಿ ಉತ್ತಮ ನಾಗರಿಕರನ್ನು ರೂಪಿಸುವುದು ಸಂಸ್ಥೆಯ ಧ್ಯೇಯವಾಗಿದೆ ಎಂದರು.
ಕಾಲೇಜು ಪ್ರಾಚಾರ್ಯ ಲಕ್ಷ್ಮಣ ಕರ್ಲಿ ಪ್ರಾಸ್ತಾವಿಕ ನುಡಿ ನೀಡಿ, ಕಾಲೇಜಿನ ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಕ್ರೀಡಾ ಸಾಧನೆಗಳ ಕುರಿತು ವಾರ್ಷಿಕ ವರದಿಯನ್ನು ವಾಚಿಸಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹನುಮಂತಪ್ಪ ಮುದ್ದಾಪುರ, ಗ್ಯಾರಂಟಿ ಯೋಜನೆ ಅಧ್ಯಕ್ಷ ಮಹೇಬೂಬ ಸಾಬ ಮುದ್ದಾಪುರ, ಪಾಲಕ ಪ್ರತಿನಿಧಿಗಳಾದ ಕಟ್ಟಿಬಸಪ್ಪ ಎಲೆಕೂಡ್ಲಿಗಿ, ಮುದಕಪ್ಪ ಕೋಳಬಾಳ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ದೀಪಾ, ಯಲ್ಲಮ್ಮ, ಮಮತಾ, ಹುಲಿಗೆಮ್ಮ ಹಾಗೂ ಉಪನ್ಯಾಸಕರಾದ ಹುಸೇನಬಾಷ, ಶಂಕ್ರಪ್ಪ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿ ಕಾಲೇಜಿನ ಶೈಕ್ಷಣಿಕ ವಾತಾವರಣವನ್ನು ಶ್ಲಾಘಿಸಿದರು.
ಉಪನ್ಯಾಸಕರಾದ ಸೋಮನಾಥ, ವಿಜಯಲಕ್ಷ್ಮಿ, ಅಕ್ಕಮಹಾದೇವಿ, ಬಸಲಿಂಗಪ್ಪ, ಶ್ರೀಕಾಂತ ಹಾಗೂ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Leave a Reply

Your email address will not be published. Required fields are marked *