ಮಾನ್ವಿ : ಪಟ್ಟಣದ ಶ್ರೀ ನಗರೇಶ್ವರ ದೇವಸ್ಥಾನದ ಆವರಣದಲ್ಲಿ ಜನವರಿ 26ರಂದು ಆರ್ಯವೈಶ್ಯ ಸಮಾಜದ ವತಿಯಿಂದ ಆಯೋಜಿಸಲಾದ ಗಣರಾಜ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾರತದ ಸಂವಿಧಾನದ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರ ಅಳವಡಿಸದೇ ಧ್ವಜಾರೋಹಣ ನಡೆಸಲಾಗಿದೆ ಎಂದು ಆರೋಪಿಸಿ ಜನಸೇವಾ ಫೌಂಡೇಶನ್ ನ ತಾಲೂಕು ಘಟಕದ ಪದಾಧಿಕಾರಿಗಳು ಮನವಿ ಸಲ್ಲಿಸಿದರು.
ಈ ಕುರಿತು ಮಾತನಾಡಿದ ಜನಸೇವಾ ಫೌಂಡೇಶನ್ ತಾಲೂಕು ಅಧ್ಯಕ್ಷ ತಾಜುದ್ದೀನ್ ಚೀಕಲಪರ್ವಿ ಅವರು, ಗಣರಾಜ್ಯೋತ್ಸವದಂತಹ ರಾಷ್ಟ್ರೀಯ ಹಬ್ಬಗಳಲ್ಲಿ ಸಂವಿಧಾನದ ಪಿತಾಮಹರ ಭಾವಚಿತ್ರವನ್ನು ಗೌರವಪೂರ್ವಕವಾಗಿ ಅಳವಡಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಆದರೆ ಈ ಕಾರ್ಯಕ್ರಮದಲ್ಲಿ ಭಾವಚಿತ್ರ ಇರದಿರುವುದು ಗಂಭೀರ ನಿರ್ಲಕ್ಷ್ಯವಾಗಿದ್ದು, ಇದು ಸಂವಿಧಾನದ ಮೌಲ್ಯಗಳಿಗೆ ಧಕ್ಕೆಯಾಗಿದೆ ಎಂದು ಹೇಳಿದರು.
ಇದೇ ವೇಳೆ ತಾಲೂಕು ಪ್ರಧಾನ ಕಾರ್ಯದರ್ಶಿ ವಾಸುದೇವ ಅವರು ಮಾತನಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋ ದೃಶ್ಯಗಳಲ್ಲಿ ಅಂಬೇಡ್ಕರ್ ಅವರ ಭಾವಚಿತ್ರ ಕಾಣಿಸದಿರುವುದು ಸ್ಪಷ್ಟವಾಗಿದೆ. ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ರಾಷ್ಟ್ರೀಯ ಹಬ್ಬಗಳ ಸಂದರ್ಭದಲ್ಲಿ ಅಗತ್ಯ ಗೌರವ ಪಾಲಿಸಬೇಕು. ಈ ಹಿನ್ನೆಲೆಯಲ್ಲಿ ಘಟನೆಯ ಕುರಿತು ಸಮಗ್ರ ತನಿಖೆ ನಡೆಸಿ, ತಪ್ಪು ಸಾಬೀತಾದಲ್ಲಿ ಸಂಬಂಧಪಟ್ಟ ಆಯೋಜಕರು ಹಾಗೂ ಹೊಣೆಗಾರ ಅಧಿಕಾರಿಗಳ ವಿರುದ್ಧ ಕಾನೂನುಬದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳಿಗೆ ಮಾನ್ವಿ ತಹಸೀಲ್ದಾರರ ಮುಖಾಂತರ ಮನವಿ ಸಲ್ಲಿಸಲಾಗಿದ್ದು, ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಜಿಲ್ಲೆಯ ಎಲ್ಲಾ ಸಂಘಟನೆಗಳಿಗೆ ಸ್ಪಷ್ಟ ಮಾರ್ಗಸೂಚಿಗಳನ್ನು ನೀಡಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಸಂವಿಧಾನಕ್ಕೆ ಗೌರವ ಹಾಗೂ ಸಾರ್ವಜನಿಕ ಶಾಂತಿ ಕಾಪಾಡುವ ನಿಟ್ಟಿನಲ್ಲಿ ತಕ್ಷಣ ಕ್ರಮ ಕೈಗೊಳ್ಳುವಂತೆ ಅವರು ವಿನಂತಿಸಿದ್ದಾರೆ.

ಈ ಸಂದರ್ಭದಲ್ಲಿ ಜನಸೇವಾ ಫೌಂಡೇಶನ್ ಉಪಾಧ್ಯಕ್ಷರಾದ ರಾಜಾಸಾಬ್, ಹಸನ್, ಗೋಕುಲ ಸಾಬ್, ಆಜೀತ್, ಸಿದ್ದರೆಡ್ಡಿ ಸೇರಿದಂತೆ ಇನ್ನಿತರರು ಇದ್ದರು.

Leave a Reply

Your email address will not be published. Required fields are marked *