ಮುದ್ದೇಬಿಹಾಳ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವತಿಯಿಂದ ಪ್ರತಿವರ್ಷದಂತೆ ಈ ವರ್ಷವೂ ವಿವಿಧ ಸರ್ಕಾರಿ ಇಲಾಖೆಗಳ ನೌಕರರ ಭಾಗವಹಿಸುವಿಕೆಯಲ್ಲಿ ಜಿಲ್ಲಾ ಮಟ್ಟದ ಕ್ರೀಡಾಕೂಟಗಳು ವಿಜೃಂಭಣೆಯಿಂದ ನಡೆಯಿತು.
ವಿಜಯಪುರ ಜಿಲ್ಲೆಯ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಈ ಕ್ರೀಡಾಕೂಟದಲ್ಲಿ ನೌಕರರು ಉತ್ಸಾಹದಿಂದ ಪಾಲ್ಗೊಂಡು ಕ್ರೀಡಾಸ್ಫೂರ್ತಿಯನ್ನು ಮೆರೆದರು.
ಭಾರ ಎತ್ತುವ ಸ್ಪರ್ಧೆಯ 70 ಕೆ.ಜಿ ಪುರುಷರ ವಿಭಾಗದಲ್ಲಿ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಹೋಬಳಿಯ ನಾಗಬೇನಾಳ ಗ್ರಾಮದ ನಿವಾಸಿ ಹಾಗೂ ಕಂದಾಯ ಇಲಾಖೆಯ ಗ್ರಾಮ ಲೆಕ್ಕಾಧಿಕಾರಿಗಳಾದ ಗಂಗಾಧರ ಜೂಲಗುಡ್ಡ ಅವರು ಅತ್ಯುತ್ತಮ ಸಾಧನೆ ತೋರಿ ಪ್ರಥಮ ಸ್ಥಾನ ಗಳಿಸಿದರು. ಈ ಮೂಲಕ ಅವರು ಜಿಲ್ಲಾ ಮಟ್ಟದಿಂದ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಇದೇ ವೇಳೆ ಕಬಡ್ಡಿ ತಂಡದ ಸ್ಪರ್ಧೆಯಲ್ಲಿಯೂ ಗಂಗಾಧರ ಜೂಲಗುಡ್ಡ ಅವರು ಪ್ರತಿನಿಧಿಸಿದ್ದ ತಂಡ ಉತ್ತಮ ಪ್ರದರ್ಶನ ನೀಡಿ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದೆ. ಒಂದೇ ಸಮಯದಲ್ಲಿ ಭಾರ ಎತ್ತುವಿಕೆ ಹಾಗೂ ಕಬಡ್ಡಿ ಎರಡೂ ವಿಭಾಗಗಳಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುವುದು ವಿಶೇಷ ಸಾಧನೆಯಾಗಿದ್ದು, ಅವರ ಪ್ರತಿಭೆಗೆ ಎಲ್ಲೆಡೆಯಿಂದ ಪ್ರಶಂಸೆ ವ್ಯಕ್ತವಾಗಿದೆ.
ಕಂದಾಯ ಇಲಾಖೆಯ ನೌಕರರ ಸಂಘದ ವಿಜಯಪುರ ಜಿಲ್ಲಾ ಅಧ್ಯಕ್ಷರಾಗಿರುವ ಗಂಗಾಧರ ಜೂಲಗುಡ್ಡ ಅವರ ಈ ಸಾಧನೆಗೆ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಪದಾಧಿಕಾರಿಗಳು, ಕ್ರೀಡಾ ಮತ್ತು ಯುವಜನ ಸಬಲೀಕರಣ ಇಲಾಖೆಯ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಸಹೋದ್ಯೋಗಿಗಳು ಅಭಿನಂದನೆ ಸಲ್ಲಿಸಿ, ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಇನ್ನೂ ಉತ್ತಮ ಸಾಧನೆ ಮಾಡುವಂತೆ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ನೌಕರರು, ಕ್ರೀಡಾಭಿಮಾನಿಗಳು ಹಾಗೂ ಸಂಘದ ಮುಖಂಡರು ಉಪಸ್ಥಿತರಿದ್ದರು. ಸರಕಾರಿ ನೌಕರರಲ್ಲಿ ದೈಹಿಕ ಸಾಮರ್ಥ್ಯ, ಶಿಸ್ತು, ತಂಡಭಾವನೆ ಹಾಗೂ ಕ್ರೀಡಾ ಮನೋಭಾವ ಬೆಳೆಸುವಲ್ಲಿ ಇಂತಹ ಕ್ರೀಡಾಕೂಟಗಳು ಅಗತ್ಯವೆಂದು ಸಂಘದ ಮುಖಂಡರು ಅಭಿಪ್ರಾಯಪಟ್ಟರು.

