ಮಸ್ಕಿಯಲ್ಲಿ ಮಾಜಿ ಶಾಸಕ ಪ್ರತಾಪಗೌಡ ಪಾಟೀಲರಿಂದ ಸುದ್ದಿಗೋಷ್ಠಮಸ್ಕಿ: ಭಾರತದ ಗ್ರಾಮೀಣ ಉದ್ಯೋಗ ನೀತಿಯಲ್ಲಿ ಕ್ರಾಂತಿಕಾರಿ ಬದಲಾವಣೆ ತರುವ ಉದ್ದೇಶದಿಂದ ಕೇಂದ್ರ ಸರ್ಕಾರವು 2005ರ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ನರೇಗಾ)ಯನ್ನು ರದ್ದುಗೊಳಿಸಿ, ಅದರ ಬದಲಿಗೆ ವಿಕಸಿತ ಭಾರತ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಅಥವಾ ವಿಬಿ-ಜಿ ರಾಮ್-ಜಿ ಕಾಯ್ದೆ 2025ನ್ನು ಜಾರಿಗೆ ತಂದಿದೆ ಎಂದು ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಹೇಳಿದರು.
ಮಸ್ಕಿ ಪಟ್ಟಣದ ಪತ್ರಿಕಾ ಭವನದಲ್ಲಿ ಬುಧವಾರ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರಪತಿಗಳ ಅಂಕಿತ ಪಡೆದಿರುವ ಈ ಹೊಸ ಕಾಯ್ದೆಯು ಗ್ರಾಮೀಣ ಆರ್ಥಿಕತೆಯನ್ನು ಬಲಪಡಿಸುವುದರ ಜೊತೆಗೆ `ವಿಕಸಿತ ಭಾರತ’ ನಿರ್ಮಾಣದ ಗುರಿಯನ್ನು ಹೊಂದಿದೆ ಎಂದರು. ಕೆಲಸ ಕೇಳಿದ ದಿನದಿಂದ ೧೫ ದಿನಗಳೊಳಗೆ ಉದ್ಯೋಗ ನೀಡದಿದ್ದರೆ ರಾಜ್ಯ ಸರ್ಕಾರಗಳು ಕಡ್ಡಾಯವಾಗಿ ನಿರುದ್ಯೋಗ ಭತ್ಯೆ ನೀಡಬೇಕು ಎಂಬ ಮಹತ್ವದ ಅಂಶವನ್ನು ಕಾಯ್ದೆಯಲ್ಲಿ ಸೇರಿಸಲಾಗಿದೆ. ಈ ಹೊಸ ಕಾಯ್ದೆಯಡಿ ಗ್ರಾಮೀಣ ಭಾಗದ ಪ್ರತಿ ಕುಟುಂಬಕ್ಕೆ ವರ್ಷಕ್ಕೆ ಕನಿಷ್ಠ ೧೨೫ ದಿನಗಳ ಉದ್ಯೋಗ ಖಾತರಿ ನೀಡಲಾಗುತ್ತದೆ ಎಂದು ತಿಳಿಸಿದರು. ಈ ಹಿಂದೆ ನರೇಗಾ ಯೋಜನೆಯಲ್ಲಿ ಕೇವಲ ೧೦೦ ದಿನಗಳ ಉದ್ಯೋಗ ಮಿತಿ ಇದ್ದು, ಇದೀಗ ಅದನ್ನು ಹೆಚ್ಚಿಸಿರುವುದು ಗ್ರಾಮೀಣ ಕುಟುಂಬಗಳ ಆರ್ಥಿಕ ಭದ್ರತೆಗೆ ದೊಡ್ಡ ಬಲ ನೀಡಲಿದೆ ಎಂದರು. ವಿಬಿ-ಜಿ ರಾಮ್ ಜಿ ಯೋಜನೆ ಕೇಂದ್ರ ಪುರಸ್ಕೃತ ಮಾದರಿಯಲ್ಲಿ ಜಾರಿಯಾಗಿದ್ದು,
೬೦:೪೦ ಅನುಪಾತದಲ್ಲಿ ವೆಚ್ಚ ಹಂಚಿಕೆ ಮಾಡಲಾಗುತ್ತದೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂತೋಷ ರಾಜಗುರು, ಬಿಜಿಪಿ ಮಂಡಲ ಅಧ್ಯಕ್ಷ ಶರಣಬಸವ ಸೊಪ್ಪಿಮಠ, ಪುರಸಭೆ ಅಧ್ಯಕ್ಷ ಸುರೇಶ ಹರಸೂರು, ಬಸವಂತರಾಯ ಕುರಿ ಇದ್ದರು.
