ರಾಯಚೂರು ಫೆಬ್ರುವರಿ 07 (ಕರ್ನಾಟಕ ವಾರ್ತೆ): ರಾಜ್ಯದ ಪ್ರಗತಿ ಜೊತೆಗೆ ಬಡವರ ಆರ್ಥಿಕತೆಯನ್ನು ಸುಧಾರಿಸಲು ನಮ್ಮ ಸರ್ಕಾರವು ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ನುಡಿದಂತೆ ನಡೆದಿದ್ದೇವೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣಪ್ರಕಾಶ್ ರುದ್ರಪ್ಪ ಪಾಟೀಲ್ ಅವರು ಹೇಳಿದರು.
ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವದ ನಿಮಿತ್ತ ರಾಯಚೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ರಾಯಚೂರು ಮಹಾನಗರ ಪಾಲಿಕೆ ಇವರುಗಳ ಸಂಯುಕ್ತಾಶ್ರಯದಲ್ಲಿ ಶನಿವಾರದಂದು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಆವರಣದಲ್ಲಿ ಹಮ್ಮಿಕೊಂಡಿದ್ದ ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ಜಿಲ್ಲಾ ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಕಾರ್ಯಗಾರದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಶಕ್ತಿ, ಗೃಹಜ್ಯೋತಿ, ಗೃಹಲಕ್ಷ್ಮೀ, ಯುವನಿಧಿ ಮತ್ತು ಅನ್ನಭಾಗ್ಯ ಸೇರಿ ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ಸುಮಾರು ಒಂದು ಲಕ್ಷ ಕೋಟಿ ರೂ.ಗಳನ್ನು ಮಧ್ಯವರ್ತಿಗಳ ಹಾವಳಿಯಿಲ್ಲದೆರಾಜ್ಯದ ಜನರ ಮನೆ ಬಾಗಿಲಿಗೆ ನೇರವಾಗಿ ತಲುಪಿಸುವ ಕೆಲಸವಾಗುತ್ತಿದೆ. ನಮ್ಮ ಸರ್ಕಾರಕ್ಕೆ ಹೆಣ್ಣು ಮಕ್ಕಳ ಮೇಲೆ ಬಹಳಷ್ಟು ವಿಶ್ವಾಸವಿದೆ. ಮಹಿಳೆಯರ ಕೈಯಲ್ಲಿ ಹಣ ನೀಡಿದರೆ, ಅವರ ಕುಟುಂಬ ಸುಧಾರಿಸುತ್ತದೆ ಎಂಬ ನಂಬಿಕೆಯಿಂದ ಪಂಚ ಗ್ಯಾರಂಟಿ ಯೋಜನೆಗಳನ್ನು ವಿಶೇಷವಾಗಿ ಮಹಿಳೆಯರನ್ನು ಕೇಂದ್ರೀಕರಿಸಿ, ಅನುಷ್ಠಾನ ಮಾಡಲಾಗಿದೆ ಎಂದರು.
ಬಡವರು, ಹಿಂದುಳಿದವರು, ಮಧ್ಯಮ ವರ್ಗದವರು ಸೇರಿದಂತೆ ಪ್ರತಿಯೊಬ್ಬರೂ ನೆಮ್ಮದಿಯಿಂದ ಬದುಕಬೇಕು. ಪ್ರತಿಯೊಬ್ಬರ ಆದಾಯ ಹೆಚ್ಚಾಗಬೇಕು ಎಂಬುದು ನಮ್ಮ ಸರ್ಕಾರದ ಉದ್ದೇಶವಾಗಿದೆ. ಆದಾಯ ಹೆಚ್ಚಾದಂತೆ ಕುಟುಂಬದ ಅಭಿವೃದ್ಧಿ ಸಾಧ್ಯವಾಗುತ್ತದೆ. ಈ ಹಿನ್ನೆಲೆಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳು ಪೂರಕವಾಗಿವೆ. ಉತ್ತಮ ಜನಾಭಿಪ್ರಾಯ ಇದ್ದಾಗ ಮಾತ್ರ ಸರ್ಕಾರಗಳು ಯಾವುದೇ ಯೋಜನೆಯನ್ನು ರೂಪಿಸಲು ಸಾಧ್ಯವಾಗುತ್ತದೆ. ಹಾಗಾಗಿ ಈ ಎಲ್ಲಾ ಯೋಜನೆಗಳ ಲಾಭ ಪಡೆದುಕೊಂಡ ಫಲಾನುಭವಿಗಳು ವಿಶೇಷವಾಗಿ ಮಹಿಳೆಯರು ಯೋಜನೆಯ ಅನುಕೂಲಗಳ ಬಗ್ಗೆ ಸ್ಪಷ್ಟವಾಗಿ ಮಾತನಾಡಬೇಕು. ಇದರಿಂದ ಯಾರೂ ಈ ಯೋಜನೆಗಳ ಬಗ್ಗೆ ಅಪಪ್ರಚಾರ ಮಾಡುಲು ಸಾಧ್ಯವಾಗುವುದಿಲ್ಲ ಎಂದು ಹೇಳಿದರು.
ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ಎಂ. ರೇವಣ್ಣ ಅವರು ಮಾತನಾಡಿ, ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ ನೇತೃತ್ವದ ನಮ್ಮ ರಾಜ್ಯ ಸರ್ಕಾರವು ಪಂಚ ಗ್ಯಾರಂಟಿ ಯೋಜನೆಗಳನ್ನು ಅತ್ಯಂತ ಯಶಸ್ವಿಯಾಗಿ ಅನುಷ್ಠಾನಗೊಳಿಸುತ್ತಿರುವ ಮೂಲಕ 25 ತಿಂಗಳುಗಳನ್ನು ಯಶಸ್ವಿಯಾಗಿ ಪೂರೈಸಿದೆ. ಯಾವುದೇ ಮಧ್ಯವರ್ತಿಗಳಿಲ್ಲದೇ ನೇರವಾಗಿ ಫಲಾನುಭವಿಗಳಿಗೆ ತಲುಪುವ ಯೋಜನೆಗಳಾಗಿವೆ. ಇವು ಇಡೀ ಭಾರತದಲ್ಲೇ ಮೊದಲ ಬಾರಿಗೆ ಜಾರಿಯಾದ ಪಾರದರ್ಶಕ ವ್ಯವಸ್ಥೆಯಾಗಿದೆ. ಪಂಚ ಗ್ಯಾರಂಟಿ ಯೋಜನೆಗಳಿಗಾಗಿ 1 ಲಕ್ಷದ 12 ಸಾವಿರ ಕೋಟಿ ರೂ.ಗಳನ್ನು ಒದಗಿಸುತ್ತಿದೆ ಎಂದರು.
ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಕಲ್ಪಿಸುವ ಶಕ್ತಿ ಯೋಜನೆಯು 665 ಕೋಟಿ ಟ್ರಿಪ್ ಗಳಲ್ಲಿ ಮಹಿಳೆಯರ ಉಚಿತ ಬಸ್ ಪ್ರಯಾಣವು ವಿಶ್ವ ದಾಖಲೆಯನ್ನು ನಿರ್ಮಿಸಿದೆ. ಈ ಯೋಜನೆಯಿಂದ ಮಹಿಳೆಯರ ಜೀವನದಲ್ಲಿ ಸಂತೋಷ ಮತ್ತು ಸ್ವಾತಂತ್ರ್ಯ ಹೆಚ್ಚಾಗಿದೆ. ಮನೆಮಧ್ಯೆ ಸೀಮಿತವಾಗಿದ್ದ ಮಹಿಳೆಯರು ಇದೀಗ ದೇವಸ್ಥಾನಗಳು, ಬಂಧು, ಬಳಗದ ಮನೆಗಳಿಗೆ, ಪ್ರವಾಸಿ ತಾಣಗಳಿಗೆ ಮುಕ್ತವಾಗಿ ಸಂಚರಿಸುತ್ತಿರುವುದು ಕಾಣಸಿಗುತ್ತಿದೆ. ನಮ್ಮ ದೇಶದ ಬೇರೆ ಬೇರೆ ರಾಜ್ಯಗಳಲ್ಲಿ ಗ್ಯಾರಂಟಿ ಯೋಜನೆಗಳ ಮಾದರಿಯಲ್ಲಿ ಜಾರಿಗೆ ತಂದ ಯೋಜನೆಗಳನ್ನು ಕೆಲವೇ ಕೆಲವು ತಿಂಗಳಲ್ಲಿ ನಿಲ್ಲಿಸಿದ್ದಾರೆ. ಆ ಎಲ್ಲಾ ರಾಜ್ಯಗಳಿಗೆ ನಮ್ಮ ರಾಜ್ಯ ಒಂದು ಮಾದರಿಯಾಗಿದೆ ಎಂದು ಹೇಳಿದರು.
ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ (ಮೈಸೂರು ವಿಭಾಗದ) ಉಪಾಧ್ಯಕ್ಷೆ ಡಾ. ಪುಷ್ಪ ಅಮರನಾಥ ಅವರು ಮಾತನಾಡಿ, ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯ ಸರ್ಕಾರವು ಭದ್ರತೆಯ ಭರವಸೆ ನೀಡಿದೆ. ಮಹಿಳೆಯರ ಬದುಕಿಗೆ ಆರ್ಥಿಕ ಮತ್ತು ಸಾಮಾಜಿಕ ಭದ್ರತೆ ಒದಗಿಸುವ ಉದ್ದೇಶದಿಂದ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಮಹಿಳೆಯರಲ್ಲಿ ಆತ್ಮವಿಶ್ವಾಸ ಹೆಚ್ಚಿಸಿವೆ ಇದು ಅಭಿನಂದನಾರ್ಹವಾಗಿದೆ. ಗ್ಯಾರಂಟಿ ಯೋಜನೆಗಳು ಅರ್ಹ ಪ್ರತಿಯೊಬ್ಬರಿಗೂ ತಲುಪುವಂತೆ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು. ಶಯೋಜನೆಯಡಿ ಉಚಿತ ಬಸ್ ಪ್ರಯಾಣ ಸೌಲಭ್ಯ ಕಲ್ಪಿಸಿರುವುದರಿಂದ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ರಾಯಚೂರು ಉತ್ಸವದಲ್ಲಿ ಭಾಗವಹಿಸಲು ಸಾಧ್ಯವಾಗಿದೆ ಎಂದರು.
ಜಿಲ್ಲಾ ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಪಾಮಯ್ಯ ಮುರಾರಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ರಾಯಚೂರು ಜಿಲ್ಲೆಯಲ್ಲಿ ಗೃಹಲಕ್ಷ್ಮೀ ಯೋಜನೆಯಡಿ 4,37,355 ಫಲಾನುಭವಿಗಳಿಗೆ ಸಹಾಯಧನ ಒದಗಿಸಲಾಗಿದ್ದು, ಇದಕ್ಕಾಗಿ 2045.376 ಕೋಟಿ ರೂ.ಗಳ ವೆಚ್ಚ ಭರಿಸಲಾಗಿದೆ. ಶಕ್ತಿ ಯೋಜನೆಯಡಿ 11.28 ಕೋಟಿ ಫಲಾನುಭವಿಗಳು ಉಚಿತ ಬಸ್ ಪ್ರಯಾಣದ ಸೌಲಭ್ಯ ಪಡೆದುಕೊಂಡಿದ್ದಾರೆ. 4,53,891 ಪಡಿತರ ಚೀಟಿಗಳಿಗೆ ಅನ್ನಭಾಗ್ಯ ಯೋಜನೆಯಿಂದ ಅನುಕೂಲವಾಗಿದೆ. ಗೃಹಜ್ಯೋತಿ ಯೋಜನೆಯಡಿ ಶೇ. 95ರಷ್ಟು ಪ್ರಗತಿ ಸಾಧಿಸಲಾಗಿದೆ. ಯುವನಿಧಿ ಯೋಜನೆಯಲ್ಲಿ ರಾಯಚೂರು ಜಿಲ್ಲೆ 4ನೇ ಸ್ಥಾನದಲ್ಲಿದೆ. ಇಲ್ಲಿಯವರೆಗೆ ಜಿಲ್ಲೆಯಲ್ಲಿ 12,056 ಫಲಾನುಭವಿಗಳಿಗೆ ಸಹಾಯಧನ ನೀಡಲಾಗಿದೆ ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ್ ಕುಮಾರ್ ಕಾಂದೂ ಅವರು ಕಾರ್ಯಕ್ರಮದ ರೂಪರೇಷಗಳ ಕುರಿತು ತಿಳಿಸಿದರು. ಜಾಗೃತ ಕರ್ನಾಟಕದ ಸಂಚಾಲಕರಾದ ಪ್ರೊ. ಬಿ.ಸಿ.ಬಸವರಾಜ ಅವರು ಪಂಚ ಗ್ಯಾರಂಟಿ ಯೋಜನೆಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರದ ಎನ್.ಎಸ್.ಬೋಸರಾಜು, ರಾಯಚೂರು ಸಂಸದರಾದ ಜಿ.ಕುಮಾರ ನಾಯಕ, ಶಾಸಕರಾದ ಬಸನಗೌಡ ದದ್ದಲ್, ಹಂಪನಗೌಡ ಬಾದರ್ಲಿ, ಆರ್.ಬಸನಗೌಡ ತುರ್ವಿಹಾಳ, ವಿಧಾನ ಪರಿಷತ್ ಸದಸ್ಯ ಎ.ವಸಂತಕುಮಾರ, ಬಸನಗೌಡ ಬಾದರ್ಲಿ, ಎಪಿಎಂಸಿ ಅಧ್ಯಕ್ಷ ಮಲ್ಲಿಕಾರ್ಜುನ ಗೌಡ, ಆರ್‌ಡಿಎ ಅಧ್ಯಕ್ಷ ರಾಜಶೇಖರ ರಾಮಸ್ವಾಮಿ, ಜಿಲ್ಲಾಧಿಕಾರಿಗಳಾದ ಕೆ.ನಿತೀನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಅರುಣಾಂಗ್ಷು ಗಿರಿ ಸೇರಿದಂತೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಉಪಾಧ್ಯಕ್ಷರು, ವಿವಿಧ ತಾಲೂಕುಗಳ ಅಧ್ಯಕ್ಷರು, ಸದಸ್ಯರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *