ಮಹಿಳೆಯರಿಗೆ ಸಂಬಂಧಿಸಿದ ಯಾವುದೇ ಸಮಸ್ಯೆಗಳನ್ನು ಪರಿಹರಿಸಲು ರಾಜ್ಯ ಮಹಿಳಾ ಆಯೋಗವು ಸದಾ ಸಿದ್ದವಾಗಿದ್ದು, ಮಹಿಳೆಯರ ರಕ್ಷಣೆಗೆ ಹಾಗೂ ಮಹಿಳೆಯರಿಗೆ ಕಾನೂನಾತ್ಮಕ ನೆರವು ನೀಡಲು ಬದ್ಧವಾಗಿರುತ್ತದೆ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷ್ಮೀ ಚೌಧರಿ ಅವರು ಹೇಳಿದರು.
ಕೊಪ್ಪಳ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಹಮ್ಮಿಕೊಂಡಿದ್ದ ಪ್ರವಾಸ ಕಾರ್ಯಕ್ರಮದಲ್ಲಿ ಗಮನಿಸಿದ ಅಂಶಗಳು, ಸಮಸ್ಯೆಗಳ ಕುರಿತು ಕೈಗೊಂಡ ಕ್ರಮಗಳ ಕುರಿತು ಮಾಹಿತಿ ನೀಡಲು ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರದಂದು ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಅವರು ಮಾತನಾಡಿದರು.
ಜಿಲ್ಲೆಯ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳಲ್ಲಿ 10ಕ್ಕಿಂತ ಹೆಚ್ಚು ಉದ್ಯೋಗಿಗಳು ಕಾರ್ಯನಿರ್ವಹಿಸುವ ಸ್ಥಳಗಳಲ್ಲಿ ಕಡ್ಡಾಯವಾಗಿ ಆಂತರಿಕ ದೂರು ನಿವಾರಣಾ ಸಮಿತಿ ರಚಿಸಬೇಕು ಎಂದು ಸೂಚಿಸಲಾಗಿದೆ. ಕೆಲಸದ ಸ್ಥಳದಲ್ಲಿ ಮಹಿಳೆಯರಿಗೆ ಸುರಕ್ಷಿತ ವಾತಾವರಣ ನಿರ್ಮಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಮದ್ಯ ಹಾಗೂ ಮಾದಕ ವಸ್ತುಗಳ ಮಾರಾಟ ಮತ್ತು ಬಳಕೆಗೆ ಕಡಿವಾಣ ಹಾಕಲು ಅಬಕಾರಿ ಇಲಾಖೆಗೆ ಸೂಚಿಸಲಾಗಿದೆ ಎಂದರು.
ನಗರದ ಸಿದ್ದೇಶ್ವರ ನಗರದಲ್ಲಿನ ಅಲೆಮಾರಿ ಜನಾಂಗವನ್ನು ಭೇಟಿ ಮಾಡಲಾಗಿದ್ದು, ಅವರಿಗೆ ನಗರಸಭೆಯಿಂದ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗಿದೆ. ಅಲ್ಲಿನ ವಿದ್ಯುತ್ ಕಂಬ ದುರಸ್ತಿಗೊಳಿಸಲಾಗಿದೆ. ಆದರೆ ಅಂಗನವಾಡಿ ಪಕ್ಕದಲ್ಲೇ ರೈಲು ಹಳಿ ಇರುವುದರಿಂದ ಮಕ್ಕಳ ಸುರಕ್ಷತೆ ಪ್ರಶ್ನೆಯಾಗಿದ್ದು, ಸುಮಾರು 3 ಕಿ.ಮೀ ವ್ಯಾಪ್ತಿಯಲ್ಲಿ ಸುರಕ್ಷತಾ ಫೆನ್ಸಿಂಗ್ ಅಳವಡಿಸಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಜಿಲ್ಲೆಯ ಎಲ್ಲಾ ವಿದ್ಯಾರ್ಥಿ ವಸತಿ ನಿಲಯಗಳಲ್ಲಿ ಮೂರು ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ಕಡ್ಡಾಯವಾಗಿ ನಡೆಸಬೇಕು. ಗುಣಮಟ್ಟದ ಆಹಾರ ಹಾಗೂ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಬೇಕು. ಸರ್ಕಾರಿ ಯೋಜನೆಗಳ ಬಗ್ಗೆ ಜನರಲ್ಲಿ ಇನ್ನಷ್ಟು ಜಾಗೃತಿ ಮೂಡಿಸುವುದು ಅಗತ್ಯ. ಪ್ರತಿ ಹಳ್ಳಿಯಲ್ಲಿ ಮಹಿಳಾ ಗ್ರಾಮಸಭೆ ಕಡ್ಡಾಯವಾಗಿ ನಡೆಸಿ ಮಹಿಳೆಯರ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಸಂಬಂಧಿತ ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.
ಜಿಲ್ಲೆಯ ತಾಯಿ ಮತ್ತು ಮಗುವಿನ ಆಸ್ಪತ್ರೆಯಲ್ಲಿ ಉತ್ತಮ ಸೌಲಭ್ಯಗಳು ಒದಗಿಸಿರುವುದು ಪ್ರಶಂಸನೀಯ. ಕಾರಟಗಿ ತಾಲ್ಲೂಕಿನ ಮೊರಾರ್ಜಿ ದೇಸಾಯಿ ವಿದ್ಯಾರ್ಥಿನಿಯರ ವಸತಿ ನಿಲಯಕ್ಕೆ ಭೇಟಿ ನೀಡಿ ಉತ್ತಮ ವ್ಯವಸ್ಥೆ ಗಮನಿಸಲಾಗಿದೆ. ಇದೇ ರೀತಿಯ ಸೌಲಭ್ಯಗಳನ್ನು ಜಿಲ್ಲೆಯ ಎಲ್ಲಾ ವಸತಿ ನಿಲಯಗಳಲ್ಲಿ ಒದಗಿಸಬೇಕು ಎಂದು ತಿಳಿಸಿದರು.
ನರೇಗಾ ಯೋಜನೆಯಡಿ ಶೇ.50 ರಷ್ಟು ಜಾಬ್‌ಕಾರ್ಡ್‌ಗಳನ್ನು ಮಹಿಳೆಯರಿಗೆ ನೀಡಬೇಕು ಹಾಗೂ ಹೆಚ್ಚಿನ ಉದ್ಯೋಗದಿನಗಳನ್ನು ಒದಗಿಸಬೇಕು ಎಂದು ಇಲಾಖಾ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಡಿವೈಎಸ್‌ಪಿ ಮುತ್ತಣ್ಣ ಸವರಗೋಳ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪಿ.ವೈ. ಶೆಟ್ಟೆಪ್ಪನವರ ಸೇರಿದಂತೆ ಅಧಿಕಾರಿಗಳು ಮತ್ತು ಮಾಧ್ಯಮ ಪ್ರತಿನಿಧಿಗಳು ಉಪಸ್ಥಿತರಿದ್ದರು.

