ರಾಜ್ಯದ ಕರಾವಳಿ ಹಾಗೂ ಉತ್ತರ ಒಳನಾಡು ಭಾಗಗಳಲ್ಲಿ ತೀವ್ರ ಚಳಿಯ ಜೊತೆಗೆ ಒಣಹವೆ ಮುಂದುವರಿಯಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಕರಾವಳಿ ಭಾಗದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣಹವೆಯ ವಾತಾವರಣ ಇರಲಿದೆ.ದಕ್ಷಿಣ ಒಳನಾಡಿನ ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಚಿತ್ರದುರ್ಗ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳಲ್ಲಿಯೂ ಒಣಹವೆ ಮುಂದುವರಿಯಲಿದೆ.
ಇದೇ ರೀತಿ ಉತ್ತರ ಒಳನಾಡಿನ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳಲ್ಲೂ ಕಳೆದ ಹಲವು ದಿನಗಳಿಂದ ಕಂಡುಬರುತ್ತಿರುವ ಒಣಹವೆಯ ವಾತಾವರಣ ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇಂದು ಬೆಂಗಳೂರಿನಲ್ಲಿ ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ಹಾಗೂ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆ ಇದೆ. ತೀವ್ರ ಚಳಿಯಿಂದ ಜನರ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ, ಬೆಚ್ಚಗಿನ ಉಡುಪು ಧರಿಸುವುದು, ಬಿಸಿ ಆಹಾರ ಸೇವನೆ ಮಾಡುವುದು ಹಾಗೂ ಮಕ್ಕಳು ಮತ್ತು ವೃದ್ಧರು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ.


