ಸಿಂಧನೂರು, ಫೆಬ್ರವರಿ 09: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಯಚೂರು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಜವಳಗೇರಾ ಇವರ ಸಂಯುಕ್ತ ಆಶ್ರಯದಲ್ಲಿ ಫೆಬ್ರವರಿ 10, 2026 ರಂದು ನಡೆಯುವ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಅಂಗವಾಗಿ ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ತರಬೇತಿ ಕಾರ್ಯಾಗಾರವನ್ನು ಪ್ರಾಥಮಿಕ ಆರೋಗ್ಯ ಕೇಂದ್ರ ಜವಳಗೇರಾದಲ್ಲಿ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ವೈದ್ಯಾಧಿಕಾರಿ ಡಾ. ಪ್ರೀತಾ ಪಾಟೀಲ ಅವರು, ಮಕ್ಕಳಲ್ಲಿ ಜಂತುಹುಳಗಳ ಬಾಧೆಯಿಂದ ಅಪೌಷ್ಟಿಕತೆ, ರಕ್ತಹೀನತೆ ಉಂಟಾಗುತ್ತಿದ್ದು, ದೈಹಿಕ ಹಾಗೂ ಮಾನಸಿಕ ಬೆಳವಣಿಗೆ ಕುಂಠಿತವಾಗುತ್ತದೆ ಎಂದು ತಿಳಿಸಿದರು. ಆದ್ದರಿಂದ 1 ರಿಂದ 19 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಅಲ್ಬೆಂಡಾಜೋಲ್ ಮಾತ್ರೆಯನ್ನು ತಪ್ಪದೇ ನೀಡಬೇಕು ಎಂದು ಹೇಳಿದರು. ಮಕ್ಕಳ ಆರೋಗ್ಯದ ಬಗ್ಗೆ ಪಾಲಕರು ಹೆಚ್ಚಿನ ಜಾಗೃತಿ ವಹಿಸಬೇಕು ಎಂದರು.
ನಂತರ ಮಾತನಾಡಿದ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಾಲಪ್ಪ ನಾಯಕ ಅವರು, ಜಂತುಹುಳು ತಡೆಗಟ್ಟುವ ಅಲ್ಬೆಂಡಾಜೋಲ್ ಮಾತ್ರೆಯನ್ನು ಫೆಬ್ರವರಿ 10 ರಂದು ಎಲ್ಲಾ ಅಂಗನವಾಡಿ ಕೇಂದ್ರಗಳು, ಬಾಲವಾಡಿಗಳು, ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಉಚಿತವಾಗಿ ವಿತರಿಸಲಾಗುತ್ತದೆ ಎಂದು ತಿಳಿಸಿದರು. ಪ್ರತಿಯೊಬ್ಬ ವಿದ್ಯಾರ್ಥಿ ಹಾಗೂ ಪಾಲಕರು ಇದರ ಸದುಪಯೋಗ ಪಡೆಯಬೇಕು ಎಂದರು. ಫೆಬ್ರವರಿ 10 ರಂದು ಮಾತ್ರೆ ಸೇವಿಸದ ಮಕ್ಕಳಿಗೆ ಫೆಬ್ರವರಿ 16 ರಂದು ನಡೆಯುವ “ಮಾಪ್-ಅಪ್ ದಿನ”ದಂದು ತಪ್ಪದೇ ಮಾತ್ರೆ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಸಮುದಾಯ ಆರೋಗ್ಯ ಅಧಿಕಾರಿಗಳಾದ ಶೋಭಾ, ಮೇರಿ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳಾದ ನಿಂಗಮ್ಮ, ರಾಧಾ, ಪಾರ್ವತಿ, ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಮಹೇಶ, ಉದಯ, ಅಂಬಮ್ಮ ಸೇರಿದಂತೆ ಆಶಾ ಕಾರ್ಯಕರ್ತರು ಉಪಸ್ಥಿತರಿದ್ದರು.
ಕಾರ್ಯಕ್ರಮವು ಆರೋಗ್ಯ ಕಾರ್ಯಕರ್ತರಲ್ಲಿ ಜಾಗೃತಿ ಮೂಡಿಸಿ, ಮಕ್ಕಳಲ್ಲಿ ಜಂತುಹುಳು ನಿವಾರಣೆಗೆ ಸಹಕಾರಿಯಾಗಲಿದೆ ಎಂದು ಆಯೋಜಕರು ಅಭಿಪ್ರಾಯ ವ್ಯಕ್ತಪಡಿಸಿದರು.

Leave a Reply

Your email address will not be published. Required fields are marked *