ರಾಯಚೂರು ಫೆಬ್ರವರಿ 09 (ಕರ್ನಾಟಕ ವಾರ್ತೆ): ಜಿಲ್ಲಾಡಳಿತದಿಂದ ಜಿಲ್ಲಾ ಕೇಂದ್ರದಲ್ಲಿ ಫೆ.19ರ ಗುರುವಾರ ದಂದು ಆಚರಿಸಲಾಗುವ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಗೆ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ರಾಯಚೂರು ಸಹಾಯಕ ಆಯುಕ್ತರಾದ ಡಾ.ಹಂಪಣ್ಣ ಸಜ್ಜನ್ ಅವರು ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಫೆ.09ರ ಸೋಮವಾರ ದಂದು ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯ ಎಲ್ಲ ತಾಲೂಕು ಸರ್ಕಾರಿ ಕಚೇರಿಗಳು, ಗ್ರಾಮ ಪಂಚಾಯಿತಿಗಳಲ್ಲಿ, ಶಾಲಾ-ಕಾಲೇಜುಗಳು ಹಾಗೂ ವಸತಿ ನಿಲಯಗಳಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯನ್ನು ಕಡ್ಡಾಯವಾಗಿ ಆಚರಣೆ ಮಾಡಬೇಕಿದೆ. ಈ ನಿಟ್ಟಿನಲ್ಲಿ ಸಂಬಂಧಿಸಿದ ಅಧಿಕಾರಿಗಳು ನಾನಾ ಕಾರ್ಯಸಿದ್ಧತೆಗೆ ಅಗತ್ಯ ಕ್ರಮ ವಹಿಸಬೇಕು. ಎಲ್ಲ ಇಲಾಖೆಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅಂದು ಜಿಲ್ಲಾ ಕೇಂದ್ರದಲ್ಲಿ ಬೆಳಗ್ಗೆ 09 ಗಂಟೆಗೆ ನಗರದ ಕಸಭಾವಿ ಹತ್ತಿರದ ಛತ್ರಪತಿ ಶಿವಾಜಿ ಮಹಾರಾಜರ ವೃತ್ತದಿಂದ ಭಾವಚಿತ್ರದ ಮೆರವಣಿಗೆ ನಡೆಯಲಿದೆ. ಬೆಳಗ್ಗೆ 11 ಗಂಟೆಗೆ ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಮೆರವಣಿಗೆ ಸಾಗುವ ಮಾರ್ಗ ಹಾಗೂ ವೇದಿಕೆ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಸ್ವಚ್ಛತೆ, ಕುಡಿಯುವ ನೀರಿನ ವ್ಯವಸ್ಥೆಯನ್ನು ಮಹಾನಗರ ಪಾಲಿಕೆಯಿಂದ ಕಲ್ಪಿಸಬೇಕು ಎಂದರು.
ಜಯಂತಿ ಕಾರ್ಯಕ್ರಮದ ವೇದಿಕೆ ಅಲಂಕಾರ, ಗಣ್ಯರಿಗೆ ಪುಸ್ತಕ ವಿತರಣೆ, ಪೂಜೆಗೆ ಹೂವು-ಹಾರಗಳ ವ್ಯವಸ್ಥೆ ಮಾಡಬೇಕು. ಪೊಲೀಸ್ ಇಲಾಖೆಯಿಂದ ಮೆರವಣಿಗೆ ಹಾಗೂ ವೇದಿಕೆ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಸೂಕ್ತ ಬಂದೋಬಸ್ತ್ ಒದಗಿಸಬೇಕು. ಶಿಷ್ಠಾಚಾರದಂತೆ ಆಮಂತ್ರಣ ಪತ್ರಿಕೆ ಮುದ್ರಿಸಿ ಗಣ್ಯರ ಆಹ್ವಾನಕ್ಕೆ ಕ್ರಮ ವಹಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ವೇದಿಕೆ ಕಾರ್ಯಕ್ರಮದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಅವರ ಕುರಿತು ಉಪನ್ಯಾಸ ನೀಡಲು ಉತ್ತಮ ಅಭ್ಯರ್ಥಿಗಳಿಗೆ ಆಹ್ವಾನಿಸಲು ನಿರ್ಣಯಿಸಲಾಯಿತು.
ಜಯಂತಿ ಆಚರಣೆ ಕಾರ್ಯಕ್ರಮಕ್ಕೆ ಸಮಾಜದ ಬಂಧುಗಳ ಸಹಕಾರವೂ ಅಗತ್ಯವಿದ್ದು, ಜಿಲ್ಲಾಡಳಿತದೊಂದಿಗೆ ಸಹಕರಿಸಿ ವ್ಯವಸ್ಥಿತ ಜಯಂತಿ ಆಚರಣೆಗೆ ಎಲ್ಲರೂ ಅನುಕೂಲ ಮಾಡಿಕೊಡಬೇಕು ಎಂದು ಅರಾಯಚೂರು ಸಹಾಯಕ ಆಯುಕ್ತರು ಸಮಾಜದ ಮುಖಂಡರಲ್ಲಿ ಕೋರಿದರು.
ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ತಹಶೀಲ್ದಾರ್ ಜಗದ್ದೀಶ್, ಮರಾಠ ಸಮಾಜದ ಅಧ್ಯಕ್ಷರಾದ ಹನುಮಂತ್ ಜಗತ್ತಪ್, ರಾಯಚೂರು ಕ್ಷತ್ರಿಯ ಒಕ್ಕೂಟದ ಅಧ್ಯಕ್ಷರು ಅಶೋಕ್ ಕುಮಾರ್ ಮೈದರ್ಕರ್, ಮುಖಂಡರಾದ ಶ್ರೀನಿವಾಸ್ ಪತಂಗೆ, ಭೀಮಣ್ಣ ಜಾಧವ, ಅಂಬಾಜಿ ರಾವು ಮೈದರ್ಕರ್, ಸೂರ್ಯ ರಾವು, ರಘು ನನ್ನೊರೆ, ಅಮಿತ್ ಜಗಟಪ್, ಸತೀಶ್ ಜಗಟಪ್, ಅಮರೇಶ್, ಸಿದ್ದು, ಶರಣು, ಶಿವರಾಮ್ ಸಿಂಗ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿ ಸಭೆಯಲ್ಲಿ ಇದ್ದರು.

Leave a Reply

Your email address will not be published. Required fields are marked *