ಮಾನ್ವಿ : ಪಟ್ಟಣದ ಕರ್ನಾಟಕ ಬ್ಯಾಂಕ್ ಹತ್ತಿರದ ಹೆದ್ದಾರಿಯಲ್ಲಿ ಮಂಗಳವಾರ ಮಧ್ಯಾಹ್ನ ಸುಮಾರು 12 ಗಂಟೆ ವೇಳೆಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಚೆನ್ನಪ್ಪ ಮೇಟಿಗೌಡ ಮಾಡಗಿರಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಕಾಂಕ್ರೀಟ್ ಮಿಕ್ಸರ್ ಲಾರಿಯಡಿಯಲ್ಲಿ ಸಿಲುಕಿದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಚೆನ್ನಪ್ಪ ಮೇಟಿಗೌಡ ಮಾಡಗಿರಿ ಅವರು ದ್ವಿಚಕ್ರ ವಾಹನದಲ್ಲಿ ಸಾಗುತ್ತಿದ್ದ ವೇಳೆ ಲಾರಿಯೊಂದಿಗೆ ಡಿಕ್ಕಿ ಹೊಡೆದು ಕೆಳಗೆ ಬಿದ್ದಿದ್ದು, ಲಾರಿಯ ಚಕ್ರಗಳಡಿ ಸಿಲುಕಿದ ಕಾರಣ ಗಂಭೀರ ಗಾಯಗಳಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ. ಈ ಅಪಘಾತದಲ್ಲಿ ಮತ್ತೋರ್ವರಿಗೆ ಗಾಯಗಳಾಗಿವೆ.
ಘಟನೆಯ ಸುದ್ದಿ ತಿಳಿದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಪಘಾತದಿಂದಾಗಿ ಕೆಲಕಾಲ ಹೆದ್ದಾರಿಯಲ್ಲಿ ಸಂಚಾರ ದಟ್ಟಣೆ ಉಂಟಾಗಿತ್ತು.


