ರಾಯಚೂರು ಫೆ.11 (ಕರ್ನಾಟಕ ವಾರ್ತೆ): ತ್ರಿಪದಿ ಕವಿ ಎಂದೇ ಪ್ರಸಿದ್ದಿಯಾದ ಸಂತ ಕವಿ ಸರ್ವಜ್ಞ ಅವರ ಜಯಂತಿಯನ್ನು ಜಿಲ್ಲಾಡಳಿದಿಂದ ಫೆ.20ರಂದು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳ ಕಚೇರಿಯ ತಹಶೀಲ್ದಾರ್ ಜಗದೀಶ ಅವರು ಹೇಳಿದರು.
ಫೆ.11ರ ಬುಧವಾರ ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ಸಂತ ಕವಿ ಸರ್ವಜ್ಞ ಜಯಂತಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯ ಜಿಲ್ಲಾ ಹಾಗೂ ತಾಲೂಕುಮಟ್ಟದ ಎಲ್ಲ ಸರ್ಕಾರಿ ಕಚೇರಿಗಳು, ಗ್ರಾಮ ಪಂಚಾಯಿತಿಗಳಲ್ಲಿ, ಶಾಲಾ-ಕಾಲೇಜುಗಳು ಹಾಗೂ ವಸತಿ ನಿಲಯಗಳಲ್ಲಿ ಸಂತ ಕವಿ ಸರ್ವಜ್ಞ ಜಯಂತಿಯನ್ನು ಕಡ್ಡಾಯವಾಗಿ ಆಚರಣೆ ಮಾಡಬೇಕಿದೆ. ಈ ನಿಟ್ಟಿನಲ್ಲಿ ಸಂಬಂಧಿಸಿದ ಅಧಿಕಾರಿಗಳು ನಾನಾ ಕಾರ್ಯಸಿದ್ಧತೆಗೆ ಅಗತ್ಯ ಕ್ರಮ ವಹಿಸಬೇಕು. ಎಲ್ಲ ಇಲಾಖೆಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅಂದು ಜಿಲ್ಲಾ ಕೇಂದ್ರದಲ್ಲಿ ಬೆಳಿಗ್ಗೆ 09 ಗಂಟೆಗೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಭಾವಚಿತ್ರದ ಮೆರವಣಿಗೆ ನಡೆಯಲಿದೆ. ಬೆಳಿಗ್ಗೆ 11 ಗಂಟೆಗೆ ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಮೆರವಣಿಗೆ ಸಾಗುವ ಮಾರ್ಗ ಹಾಗೂ ವೇದಿಕೆ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಸ್ವಚ್ಛತೆ, ಕುಡಿಯುವ ನೀರಿನ ವ್ಯವಸ್ಥೆಯನ್ನು ಮಹಾನಗರ ಪಾಲಿಕೆಯಿಂದ ಕಲ್ಪಿಸಬೇಕು ಎಂದರು.
ಜಯಂತಿ ಕಾರ್ಯಕ್ರಮದ ವೇದಿಕೆ ಅಲಂಕಾರ, ಗಣ್ಯರಿಗೆ ಪುಸ್ತಕ ವಿತರಣೆ, ಪೂಜೆಗೆ ಹೂವು-ಹಾರಗಳ ವ್ಯವಸ್ಥೆ ಮಾಡಬೇಕು. ಪೊಲೀಸ್ ಇಲಾಖೆಯಿಂದ ಮೆರವಣಿಗೆ ಹಾಗೂ ವೇದಿಕೆ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಸೂಕ್ತ ಬಂದೋಬಸ್ತ್ ಒದಗಿಸಬೇಕು. ಶಿಷ್ಠಾಚಾರದಂತೆ ಆಮಂತ್ರಣ ಪತ್ರಿಕೆ ಮುದ್ರಿಸಿ ಗಣ್ಯರ ಆಹ್ವಾನಕ್ಕೆ ಕ್ರಮ ವಹಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಯಂತಿ ಆಚರಣೆ ಕಾರ್ಯಕ್ರಮಕ್ಕೆ ಸಮಾಜದ ಬಂಧುಗಳ ಸಹಕಾರವೂ ಅಗತ್ಯವಿದ್ದು, ಜಿಲ್ಲಾಡಳಿತದೊಂದಿಗೆ ಸಹಕರಿಸಿ ವ್ಯವಸ್ಥಿತ ಜಯಂತಿ ಆಚರಣೆಗೆ ಎಲ್ಲರೂ ಅನುಕೂಲ ಮಾಡಿಕೊಡಬೇಕು ಎಂದು ಸಮಾಜದ ಮುಖಂಡರಲ್ಲಿ ಕೋರಿದರು. ವೇದಿಕೆ ಕಾರ್ಯಕ್ರಮದಲ್ಲಿ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸುವಂತೆ ಸಮಾಜದ ಮುಖಂಡರು ಮನವಿ ಮಾಡಿದರು.
ವೇದಿಕೆ ಕಾರ್ಯಕ್ರಮದಲ್ಲಿ ಸಂತ ಕವಿ ಸರ್ವಜ್ಞ ಅವರ ಕುರಿತು ಉಪನ್ಯಾಸ ನೀಡಲು ಸಂಪನ್ಮೂಲ ವ್ಯಕ್ತಿಗಳಿಗೆ ಗುರುತಿಸಿ ಆಹ್ವಾನ ನೀಡಬೇಕು ಎಂದು ಮುಖಂಡರಾದ ವೀರಭದ್ರಪ್ಪ, ವೈ.ಸುರೇಂದ್ರ ಬಾಬು, ಶ್ರೀಸಾಯಿಬಾಬು, ಕೆ.ಗೋವಿಂದ್ ಇತರರು ಮನವಿ ಮಾಡಿದರು.
ಸಭೆಯಲ್ಲಿ ಸಮಾಜದ ಮುಖಂಡರಾದ ಪ್ರವೀಣ್ ಕುಮಾರ್, ನಿಂಗಪ್ಪ, ಶಶಿಕುಮಾರ್, ಕುರುಮೂರ್ತಿ, ಶಿವರಾಜಪ್ಪ, ವ.ಆಂಜಿನೇಯ್ಯ, ತಿಮ್ಮಪ್ಪ, ಲಕ್ಷ್ಮೀ ರೆಡ್ಡಿ, ಹನುಮಂತ ರೆಡ್ಡಿ ಮಲ್ಲಪೂರು, ರಾಕೇಶ್ ಕುಮಾರ್ ಸೇರಿದಂತೆ ಇನ್ನೀತರ ಮುಖಂಡರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.



