ಮುದ್ದೇಬಿಹಾಳ :
ನಮ್ಮ ಸರ್ಕಾರದ ಸಾಧನೆಗಳು ಹಾಗೂ ಪಂಚ ಗ್ಯಾರಂಟಿ ಯೋಜನೆಗಳ ಪ್ರಯೋಜನವನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಕಾಂಗ್ರೆಸ್ ಮುಂಚೂಣಿ ನಾಯಕರು ಮತ್ತು ಕಾರ್ಯಕರ್ತರು ಯಶಸ್ವಿಯಾಗಿದ್ದಾರೆ ಎಂದು ಶಾಸಕ ಹಾಗೂ ಕೆಎಸ್ಡಿಎಲ್ ನಿಗಮದ ಅಧ್ಯಕ್ಷ ಸಿ.ಎಸ್. ನಾಡಗೌಡ ಹೇಳಿದರು.
ಸೋಮವಾರ ಪಟ್ಟಣದ ತಮ್ಮ ನಿವಾಸದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಶಕ್ತಿ, ಗೃಹಲಕ್ಷ್ಮಿ, ಗೃಹಜ್ಯೋತಿ, ಯುವನಿಧಿ ಮತ್ತು ಅನ್ನಭಾಗ್ಯ ಸೇರಿದಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಹೇಳಿದರು. ಟೀಕೆ-ಟಿಪ್ಪಣಿಗಳ ನಡುವೆಯೂ ಆರ್ಥಿಕವಾಗಿ ಹಿಂದುಳಿದವರಿಗೆ ನೇರ ನೆರವು ನೀಡುವ ಪ್ರಾಮಾಣಿಕ ಪ್ರಯತ್ನ ಮಾಡಲಾಗಿದೆ ಎಂದು ತಿಳಿಸಿದರು.
ನಮ್ಮ ಕ್ಷೇತ್ರದಲ್ಲಿ ಶೇ. 90ಕ್ಕೂ ಹೆಚ್ಚು ಜನರು ಈ ಯೋಜನೆಗಳ ಪ್ರಯೋಜನ ಪಡೆಯುತ್ತಿದ್ದು, ವಿಶೇಷವಾಗಿ ಶೇ. 83ರಷ್ಟು ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಲಾಭ ಪಡೆಯುತ್ತಿದ್ದಾರೆ ಎಂದು ಹೇಳಿದರು.
ಮಾಜಿ ಶಾಸಕ ಎ.ಎಸ್. ಪಾಟೀಲ ನಡಹಳ್ಳಿ ಅವರ ಟೀಕೆಗಳಿಗೆ ಪ್ರತಿಕ್ರಿಯಿಸಿದ ಅವರು, ಮುದ್ದೇಬಿಹಾಳ ಕ್ಷೇತ್ರಕ್ಕೆ ಅನುದಾನ ತಂದಿಲ್ಲ ಎಂಬ ಆರೋಪ ಸತ್ಯವಲ್ಲ ಎಂದು ಹೇಳಿದರು. ಕ್ಷೇತ್ರಕ್ಕೆ 700 ಕೋಟಿ ರೂಪಾಯಿಗೂ ಹೆಚ್ಚು ಅನುದಾನ ತರಲಾಗಿದೆ ಎಂದು ತಿಳಿಸಿದರು. ಹಿಂದಿನ ಆಡಳಿತದಲ್ಲಿ ಕುಟುಂಬಪರ ಗುತ್ತಿಗೆ ಪದ್ಧತಿ ಇದ್ದರೂ ಈಗಿನ ಆಡಳಿತದಲ್ಲಿ ಅಂತಹ ಪದ್ಧತಿ ಇಲ್ಲ ಎಂದು ಹೇಳಿದರು. ಟೀಕೆ ಮಾಡುವುದನ್ನು ಬಿಟ್ಟು ನೈತಿಕ ರಾಜಕಾರಣ ಮಾಡಬೇಕು ಎಂದು ಕಿವಿಮಾತು ಹೇಳಿದರು.
ಕೇಂದ್ರದ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಅವರು, ನರೇಗಾ ಯೋಜನೆಗೆ ಸಂಬಂಧಿಸಿದ ಕೂಲಿ ಪಾವತಿಯಲ್ಲಿ ವಿಳಂಬವಾಗುತ್ತಿದೆ ಎಂದು ಆರೋಪಿಸಿದರು. ನೀರಾವರಿ ಹಾಗೂ ಕೃಷ್ಣಾ ಮೇಲ್ದಂಡೆ ಯೋಜನೆಗಳಿಗೆ ಕೇಂದ್ರದಿಂದ ಸಮರ್ಪಕ ಅನುದಾನ ಸಿಗುತ್ತಿಲ್ಲ ಎಂದು ಹೇಳಿದರು.
ತಮ್ಮ ರಾಜಕೀಯ ನಿವೃತ್ತಿ ಕುರಿತು ಹರಿದಾಡುತ್ತಿರುವ ವದಂತಿಗಳಿಗೆ ಸ್ಪಷ್ಟನೆ ನೀಡಿದ ಅವರು, ಇದು ತಮ್ಮ ಕೊನೆಯ ಚುನಾವಣೆ ಎಂದು ಎಂದಿಗೂ ಹೇಳಿಲ್ಲ ಎಂದು ತಿಳಿಸಿದರು. ಕ್ಷೇತ್ರಗಳ ಪುನರ್ವಿಂಗಡಣೆ ಅಥವಾ ಮೀಸಲಾತಿ ಬದಲಾದರೆ ಮಾತ್ರ ಬೇರೆ ಕ್ಷೇತ್ರದಲ್ಲಿ ಸ್ಪರ್ಧಿಸುವ ಪ್ರಶ್ನೆ ಬರುತ್ತದೆ. ಜನರ ಪ್ರೀತಿ ಇರುವವರೆಗೂ ಚುನಾವಣಾ ರಾಜಕಾರಣದಲ್ಲಿ ಸಕ್ರಿಯವಾಗಿರುತ್ತೇನೆ ಎಂದು ಹೇಳಿದರು.
ಉತ್ತರ ಕರ್ನಾಟಕದ ಅಭಿವೃದ್ಧಿಗಾಗಿ ಎಲ್ಲಾ ಶಾಸಕರು ಒಗ್ಗಟ್ಟಾಗಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಹೆಚ್ಚಿನ ಅನುದಾನಕ್ಕೆ ಬೇಡಿಕೆ ಇಡಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ಮಹೆಬೂಬು ಗೊಳಸಂಗಿ, ಸಿ.ಬಿ. ಅಸ್ಕಿ, ಬಿ.ಕೆ. ಬಿರಾದಾರ, ವಾಯ್.ಹೆಚ್. ವಿಜಯಕರ, ಬಾಪುರಾವು ದೇಸಾಯಿ, ಶ್ರೀಕಾಂತ್ ಚಲವಾದಿ, ಮುತ್ತಣ್ಣ ಮಸೂತಿ, ಸಂತೋಷ ಚವ್ಹಾಣ ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

