ಎನ್.ಎಸ್. ಬೋಸರಾಜು ಸಮ್ಮುಖದಲ್ಲಿ ವಿವಿಧ ಪಕ್ಷದ ಮುಖಂಡರು ಕಾಂಗ್ರೆಸ್ ಸೇರ್ಪಡೆ
ಮಾನ್ವಿ: ಪಟ್ಟಣದ ಭಾರತ ಜೋಡೊ ಭವನದಲ್ಲಿ ಬಿಜೆಪಿ ಸೇರಿದಂತೆ ವಿವಿಧ ಪಕ್ಷಗಳಿಂದ ಕಾಂಗ್ರೆಸ್ ಪಕ್ಷಕ್ಕೆ ಆಗಮಿಸಿ ಸೇರ್ಪಡೆಯಾದ ಮುಖಂಡರನ್ನು ರಾಜ್ಯ ಸಣ್ಣ ನೀರಾವರಿ ಹಾಗೂ ವಿಜ್ಞಾನ ತಂತ್ರಜ್ಞಾನ ಸಚಿವರಾದ N. S. Boseraju ಅವರು ಪಕ್ಷಕ್ಕೆ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಿವಿಧ ಕಾರಣಗಳಿಂದ ಕಾಂಗ್ರೆಸ್ ಪಕ್ಷವನ್ನು ಬಿಟ್ಟು ಬೇರೆ ಪಕ್ಷಗಳಿಗೆ ತೆರಳಿದವರು ಹಾಗೂ ಈಗ ಮರು ಸೇರ್ಪಡೆಯಾಗಿರುವ ಎಲ್ಲರನ್ನು ಮುಕ್ತ ಹೃದಯದಿಂದ ಸ್ವಾಗತಿಸಲಾಗುವುದು ಎಂದರು. ಮುಂದಿನ ಮೂರು ತಿಂಗಳಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಗಳು ಹಾಗೂ ನಂತರ ಪುರಸಭೆ, ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳನ್ನು ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿರುವುದರಿಂದ ಸ್ಥಳೀಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಗೆ ಹೆಚ್ಚಿನ ಅವಕಾಶಗಳು ದೊರೆಯಲಿವೆ ಎಂದು ಹೇಳಿದರು.
ರಾಜ್ಯ ಸರ್ಕಾರ ಜನತೆಗೆ ನೀಡಿದ ಭರವಸೆಗಳನ್ನು ಪೂರ್ಣ ಪ್ರಮಾಣದಲ್ಲಿ ಈಡೇರಿಸಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾದ 144 ಶಾಸಕರು ತಮ್ಮ ಕ್ಷೇತ್ರಗಳಲ್ಲಿ ಉತ್ತಮ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿರುವುದರಿಂದ ಜನತೆ ಕಾಂಗ್ರೆಸ್ ಪರವಾಗಿದ್ದಾರೆ ಎಂದರು. ಪ.ಜಾತಿ, ಪ.ಪಂಗಡ, ಒಬಿಸಿ ಹಾಗೂ ಅಲ್ಪಸಂಖ್ಯಾತ ಸಮುದಾಯದವರ ಬೆಂಬಲವೂ ಪಕ್ಷಕ್ಕೆ ಇರುವುದರಿಂದ ಮುಂದಿನ ಎಲ್ಲಾ ಸ್ಥಳೀಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅತಿಹೆಚ್ಚು ಮತಗಳನ್ನು ಪಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಜಿಲ್ಲೆಯಲ್ಲಿ ಪಕ್ಷವನ್ನು ಸಂಘಟಿತವಾಗಿ ಬಲಪಡಿಸಲು ಎಲ್ಲರೂ ಇಂದಿನಿಂದಲೇ ಮುಂದಾಗಬೇಕು ಎಂದು ಕರೆ ನೀಡಿದರು.
ಈ ವೇಳೆ ರಾಯಚೂರು ಸಂಸದರಾದ ಕುಮಾರ ನಾಯಕ ಮಾತನಾಡಿ, ಕೇಂದ್ರ ಸರ್ಕಾರದ ನೀತಿಗಳಿಂದ ದೇಶವು ಸಂಕಷ್ಟಕರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ದೇಶದ ಏಕತೆ ಮತ್ತು ಅಭಿವೃದ್ಧಿಗಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವುದು ಅಗತ್ಯವಾಗಿದೆ ಎಂದರು. ಎಲ್ಲಾ ಸಮುದಾಯಗಳನ್ನು ಒಂದಾಗಿ ಕರೆದುಕೊಂಡು ಹೋಗುವ ಪಕ್ಷ ಕಾಂಗ್ರೆಸ್ ಮಾತ್ರವೆಂದು ಅವರು ಹೇಳಿದರು.
ಶಾಸಕ ಹಂಪಯ್ಯನಾಯಕ ಅವರ ಸಮ್ಮುಖದಲ್ಲಿ ಅರುಣ ಚಂದಾ ನೇತೃತ್ವದಲ್ಲಿ ಬೆಂಬಲಿಗರು ಕಾಂಗ್ರೆಸ್ ಧ್ವಜವನ್ನು ಹಿಡಿದು ಪಕ್ಷ ಸೇರ್ಪಡೆಗೊಂಡರು.
ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅಬ್ದುಲ್ ಗಾಫೂರ್ ಸಾಬ್, ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ಬಿ.ಕೆ. ಅಂಬರೇಶಪ್ಪ, ಖಾಲಿದ್ ಗುರು ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.
