ಯುವ ಕಾಂಗ್ರೆಸ್ ವಿರುದ್ಧ ಬಿಜೆಪಿ ಯುವ ಮೋರ್ಚಾ ಆಕ್ರೋಶ : ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ

ರಾಯಚೂರು : ದೆಹಲಿಯಲ್ಲಿ ನಡೆದ ಭಾರತ ಎಐ ಇಂಪ್ಯಾಕ್ಟ್ ಶೃಂಗಸಭೆ–2026 ಕಾರ್ಯಕ್ರಮದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಅಶ್ಲೀಲವಾಗಿ ವರ್ತಿಸಿ ದೇಶದ ಗೌರವಕ್ಕೆ ಧಕ್ಕೆ ತರುವ ರೀತಿಯಲ್ಲಿ ನಡೆದುಕೊಂಡಿರುವುದನ್ನು ಖಂಡಿಸಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯಕ್ಕೆ ಮುತ್ತಿಗೆ ಹಾಕಿ ತೀವ್ರ ಆಕ್ರೋಶ ವ್ಯಕ್ತಪಡಿಸಲಾಯಿತು ಎಂದು ರಾಯಚೂರು ನಗರ ಶಾಸಕ ಡಾ. ಎಸ್. ಶಿವರಾಜ್ ಪಾಟೀಲ್ ಹೇಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಜಗತ್ತಿನ ಮಟ್ಟದಲ್ಲಿ ನಡೆಯುವ ಮಹತ್ವದ ಶೃಂಗಸಭೆಯಲ್ಲಿ ದೇಶದ ಮಾನಕ್ಕೆ ಧಕ್ಕೆ ತರುವಂತಹ ವರ್ತನೆ ಅಕ್ಷಮ್ಯವಾಗಿದ್ದು, ಕಾಂಗ್ರೆಸ್ ಪಕ್ಷ ದೇಶದ ಗೌರವವನ್ನು ಕಾಪಾಡುವಲ್ಲಿ ವಿಫಲವಾಗಿದೆ. ಈ ರೀತಿಯ ದೇಶದ್ರೋಹಿ ಮನೋಭಾವವನ್ನು ಬಿಜೆಪಿ ಯುವ ಮೋರ್ಚಾ ಖಂಡಿಸುತ್ತಿದ್ದು, ಇಂತಹ ಘಟನೆಗಳು ಮರುಕಳಿಸದಂತೆ ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಇದೇ ವೇಳೆ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಕಾಂಗ್ರೆಸ್ ಪಕ್ಷದ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸಂತೋಷ್ ರಾಜ್ ಗುರು, ರವೀಂದ್ರ ಜಲ್ದಾರ್, ಜಿಲ್ಲಾ ಉಪಾಧ್ಯಕ್ಷರಾದ ಟಿ. ಶ್ರೀನಿವಾಸ್ ರೆಡ್ಡಿ, ನಗರ ಘಟಕ ಅಧ್ಯಕ್ಷರಾದ ವಿ. ರಾಘವೇಂದ್ರ, ಪ್ರಧಾನ ಕಾರ್ಯದರ್ಶಿಗಳಾದ ಜೆ.ಎಂ. ಮೌನೇಶ್, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷರಾದ ಎನ್. ವಿನಾಯಕ ರಾವ್, ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷರಾದ ಪಿ. ಯಲ್ಲಪ್ಪ, ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಎನ್. ಕಾರ್ತಿಕ್ ರೆಡ್ಡಿ, ರವಿ ಗೌಡ ವೀರಪುರ, ಮಹಿಳಾ ಮೋರ್ಚಾ ಅಧ್ಯಕ್ಷರಾದ ಜಿ. ರಾಜೇಶ್ವರಿ, ಮಾಜಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾದ ಕಡಗೋಲ ಆಂಜನೇಯ, ಮಹಾನಗರ ಪಾಲಿಕೆ ಸದಸ್ಯರಾದ ಶಶಿರಾಜ್, ವಿ. ನಾಗರಾಜ್, ಯು. ನರಸರೆಡ್ಡಿ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಯುವಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *