ಹೈದರಾಬಾದ್ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದ ಪೀಠಾಧಿಪತಿಗಳಾದ ಡಾ. ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಅವರ ಆರೋಗ್ಯವನ್ನು ರಾಯಚೂರು–ಯಾದಗಿರಿ ಲೋಕಸಭಾ ಕ್ಷೇತ್ರದ ಸಂಸದ ಜಿ ಕುಮಾರ ನಾಯಕ ಅವರು ಭೇಟಿ ನೀಡಿ ವಿಚಾರಿಸಿದರು.
ಹೈದರಾಬಾದ್‌ನ ಅಪೋಲೋ ಆಸ್ಪತ್ರೆಗೆ ತೆರಳಿ ಶ್ರೀಗಳ ಆರೋಗ್ಯ ಸ್ಥಿತಿ ಕುರಿತು ವೈದ್ಯರೊಂದಿಗೆ ಸಮಾಲೋಚನೆ ನಡೆಸಿದ ಸಂಸದರು, ಶ್ರೀಗಳಿಗೆ ಲಘು ಶಸ್ತ್ರಚಿಕಿತ್ಸೆ ನೆರವೇರಿಸಿ ಸ್ಟಂಟ್ ಅಳವಡಿಸಲಾಗಿದೆ ಎಂದು ತಿಳಿಸಿದರು. ಪ್ರಸ್ತುತ ಶ್ರೀಗಳ ಆರೋಗ್ಯ ಸ್ಥಿರವಾಗಿದ್ದು, ತಜ್ಞ ವೈದ್ಯರ ತಂಡವು ನಿತ್ಯ ಪರಿಶೀಲನೆ ನಡೆಸುತ್ತಿದೆ. ಚಿಕಿತ್ಸೆಗೂ ಶ್ರೀಗಳು ಉತ್ತಮವಾಗಿ ಸ್ಪಂದಿಸುತ್ತಿದ್ದು, ಶೀಘ್ರದಲ್ಲೇ ಗುಣಮುಖರಾಗಲಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.
ಈ ಕುರಿತು ಮಾತನಾಡಿದ ಸಂಸದರು, “ಭಕ್ತರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ವೈದ್ಯರ ಸಲಹೆಯಂತೆ ಶ್ರೀಗಳು ವಿಶ್ರಾಂತಿ ಪಡೆಯುತ್ತಿದ್ದಾರೆ. ಆದಷ್ಟು ಬೇಗನೆ ಚೇತರಿಸಿಕೊಂಡು ಭಕ್ತರ ಮಧ್ಯೆ ಮರಳಲಿದ್ದಾರೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಶ್ರೀಗಳ ಆರೋಗ್ಯ ಕ್ಷೇಮಕ್ಕಾಗಿ ರಾಜ್ಯದ ವಿವಿಧ ಭಾಗಗಳಲ್ಲಿ ಭಕ್ತರು ವಿಶೇಷ ಪೂಜೆ, ಪ್ರಾರ್ಥನೆಗಳನ್ನು ಸಲ್ಲಿಸುತ್ತಿದ್ದಾರೆ. ವೈದ್ಯರ ಸೂಚನೆಯಂತೆ ಪೂರ್ಣ ಚಿಕಿತ್ಸೆ ಮುಗಿಯುವವರೆಗೆ ಭಕ್ತಾಧಿಗಳು, ಸಮಾಜದ ಮುಖಂಡರು ಹಾಗೂ ಗಣ್ಯರು ಸಹಕರಿಸಬೇಕು ಎಂದು ಮನವಿ ಮಾಡಲಾಗಿದೆ.

Leave a Reply

Your email address will not be published. Required fields are marked *