ಮಾನ್ವಿ, : ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ತಂದಿದ್ದ ವಿವಾದಿತ ಕರ್ನಾಟಕ ಜಾನುವಾರು ಸಂರಕ್ಷಣಾ ಕಾಯ್ದೆ ಮತ್ತು ಮತಾಂತರ ನಿಷೇಧ ಕಾಯ್ದೆಯನ್ನು ರದ್ದುಗೊಳಿಸಬೇಕು ಹಾಗೂ ರದ್ದುಪಡಿಸಲಾದ 4% ಮುಸ್ಲಿಂ ಮೀಸಲಾತಿಯನ್ನು ತಕ್ಷಣವೇ ಮರುಸ್ಥಾಪಿಸಬೇಕೆಂದು ಆಗ್ರಹಿಸಿ ವೆಲ್ ಫೇರ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಲಾಯಿತು.
ಮುಂಬರುವ ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಈ ಬಗ್ಗೆ ನಿರ್ಣಯ ಕೈಗೊಳ್ಳುವಂತೆ ಒತ್ತಾಯಿಸಿ, ಸಂಘಟನೆಯ ಪ್ರಮುಖರು ಮುಖ್ಯಮಂತ್ರಿಗಳಿಗೆ ಬರೆದ ಜ್ಞಾಪನ ಪತ್ರದ ಮೂಲಕ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಕರ್ನಾಟಕ ಜಾನುವಾರು ಸಂರಕ್ಷಣಾ ಕಾಯ್ದೆ, 2021 ರಾಜ್ಯದಲ್ಲಿ ಭಯದ ವಾತಾವರಣವನ್ನು ಸೃಷ್ಟಿಸಿದೆ. ಈ ಕಾಯ್ದೆಯ ನೆಪದಲ್ಲಿ ಗೋ ಸಾಗಾಣಿಕೆದಾರರ ಮೇಲೆ ಹಲ್ಲೆ, ಶೂಟೌಟ್ ಮತ್ತು ಆಸ್ತಿ ಜಪ್ತಿಯಂತಹ ಘಟನೆಗಳು ನಡೆಯುತ್ತಿವೆ. ಅಲ್ಲದೆ, ರೈತರು ತಾವು ಸಾಕಿದ ಜಾನುವಾರುಗಳನ್ನು ಮಾರಾಟ ಮಾಡಲು ಸಾಧ್ಯವಾಗದೆ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಮನವಿಯಲ್ಲಿ ವಿವರಿಸಲಾಗಿದೆ.
ಧರ್ಮ ಸ್ವಾತಂತ್ರ ಸಂರಕ್ಷಣಾ ಕಾಯ್ದೆ (ಮತಾಂತರ ನಿಷೇಧ ಕಾಯ್ದೆ) ಭಾರತದ ಸಂವಿಧಾನಕ್ಕೆ ವಿರುದ್ಧವಾಗಿದ್ದು, ಇದು ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯಕ್ಕೆ ಕಾರಣವಾಗಿದೆ. ಪ್ರತಿಯೊಬ್ಬರಿಗೂ ತಮ್ಮಿಷ್ಟದ ಧರ್ಮವನ್ನು ಪಾಲಿಸುವ ಹಕ್ಕನ್ನು ಸಂವಿಧಾನ ನೀಡಿದ್ದರೂ, ಈ ಕಾಯ್ದೆಯು ವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುತ್ತಿದೆ ಎಂದು ದೂರಲಾಗಿದೆ.
ಚುನಾವನಾ ಭರವಸೆ ಈಡೇರಿಸಲು ಒತ್ತಾಯ:
2023ರ ವಿಧಾನಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಈ ಜನವಿರೋಧಿ ಕಾಯ್ದೆಗಳನ್ನು ಹಿಂಪಡೆಯುವುದಾಗಿ ಭರವಸೆ ನೀಡಿತ್ತು. ಇದೀಗ ಸರ್ಕಾರವು ತನ್ನ ಮಾತನ್ನು ಉಳಿಸಿಕೊಳ್ಳುವ ಮೂಲಕ ಅಲ್ಪಸಂಖ್ಯಾತರಿಗೆ ಮತ್ತು ರೈತರಿಗೆ ನ್ಯಾಯ ಒದಗಿಸಬೇಕೆಂದು ಮುಖಂಡರು ಒತ್ತಾಯಿಸಿದ್ದಾರೆ.
ಜೊತೆಗೆ, ಶಿಕ್ಷಣ ಮತ್ತು ಉದ್ಯೋಗದಲ್ಲಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು, ಹಿಂದೆ ರದ್ದುಪಡಿಸಲಾಗಿದ್ದ 4% ಮುಸ್ಲಿಂ ಮೀಸಲಾತಿಯನ್ನು ಮರುಸ್ಥಾಪಿಸಬೇಕೆಂದು ಇದೇ ವೇಳೆ ಆಗ್ರಹಿಸಲಾಯಿತು.
ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷ ಶೇಕ್ ಬಾಬಾ ಹುಸೇನ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಎಂ.ಎ.ಎಚ್ ಮುಕೀಮ್, ತಾಲೂಕು ಕಾರ್ಯದರ್ಶಿ ನಾಸಿರ್ ಅಲಿ, ಮುಖಂಡರಾದ ಮಿರ್ಜಾ ಬಾಬಾ ಬೇಗ, ಶೇಕ್ ಮಹಬೂಬ್, ಅಹಮದ್ ಹುಸೇನ್, ರಬ್ಬಾನಿ ಖುರೇಶಿ, ಮಹಮ್ಮದ್ ಹರುನ್, ಅಬ್ದುಲ್ ಸಮದ್, ಸಿರಾಜ್ ಪಾಷಾ, ಆಲಮ್ ಸಾಬ್, ಸೈಯದ್ ನಾಸಿರ್ ಉದ್ದಿನ್ ಖಾಜಿ, ರೋಹಿತ್ ಪಾಷಾ ಮುಂತಾದವರು ಉಪಸ್ಥಿತರಿದ್ದರು.

